ನವದೆಹಲಿ: ಮರಣದಂಡನೆ ಶಿಕ್ಷಗೆ ಗುರಿಯಾಗಿರುವ ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿ ಕುಲಭೂಷಣ್ ಜಾಧವ್ ತೀರ್ಪಿನ ಬಗ್ಗೆ ಕೇಂದ್ರ ಸರ್ಕಾರ ಅಂತರರಾಷ್ಟ್ರೀಯ ನ್ಯಾಯಾಲಯದಲ್ಲಿ (ಐಸಿಜೆ) ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.
ಕುಲಭೂಷಣ್ ಜಾಧವ್ ತೀರ್ಪಿನ ಬಗ್ಗೆ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಲು ನಿರಾಕರಿಸಿದ್ದಾರೆ, ಕ್ಷಮಾದಾನ ಅರ್ಜಿ ಪ್ರಕ್ರಿಯೆ ಮುಂದುವರಿಸಲು ನಿರ್ಧರಿಸಿದ್ದಾರೆ ಎಂದು ಪಾಕಿಸ್ತಾನ ಹೇಳಿದ ಬೆನ್ನಲೇ ಕಾಂಗ್ರೆಸ್ ಸರ್ಕಾರಕ್ಕೆ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸುವಂತೆ ಒತ್ತಾಯಿಸಿದೆ.
ಪಾಕಿಸ್ತಾನದಿಂದ ಏನನ್ನೂ ನಿರೀಕ್ಷಿಸಲು ಸಾಧ್ಯವಿಲ್ಲ, ನಾವು ಭಾರತ ಸರ್ಕಾರದ ಮೇಲೆ ನಂಬಿಕೆ ಇಡಬೇಕಾಗಿದೆ. ಕುಲಭೂಷಣ್ ಜಾಧವ್ ಅವರನ್ನು ಬಿಡುಗಡೆಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಎಂದು ಕಾಂಗ್ರೆಸ್ ಪಕ್ಷದ ವಕ್ತಾರ ಅಭಿಷೇಕ್ ಮನುಸಿಂಘ್ವಿ ಹೇಳಿದ್ದಾರೆ.
ಈ ವಿಷಯ ಇಲ್ಲಿಗೆ ಮುಗಿದಿಲ್ಲ, ಪಾಕಿಸ್ತಾನ ಕಾನೂನಿಗೆ ತಿದ್ದುಪಡಿಗಳನ್ನು ಮಾಡುವ ಮೊದಲು ಕೇಂದ್ರ ಸರ್ಕಾರ ಅಂತರರಾಷ್ಟ್ರೀಯ ನ್ಯಾಯಾಲಯದಲ್ಲಿ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಬೇಕು ಹಾಗೂ ಜಾಗತಿಕಮಟ್ಟದಲ್ಲಿ ಜನಾಭಿಪ್ರಾಯ ಮೂಡಿಸುವಂತಹ ಕೆಲಸಗಳನ್ನು ಸರ್ಕಾರ ಮಾಡಬೇಕು ಎಂದು ಸಿಂಘ್ವಿ ಹೇಳಿದ್ದಾರೆ.
ಪಾಕಿಸ್ತಾನದ ಪ್ರಕಾರ, 2016ರ ಮಾರ್ಚ್ 3ರಂದು ಜಾಧವ್ ಅವರನ್ನು ಬಂಧಿಸಲಾಗಿದೆ. ಗೂಢಚರ್ಯೆ ಮತ್ತು ಭಯೋತ್ಪಾದನೆ ಆರೋಪದಲ್ಲಿ ಅವರಿಗೆ 2017ರ ಏಪ್ರಿಲ್‌ನಲ್ಲಿ ಮರಣದಂಡನೆ ವಿಧಿಸಲಾಗಿತ್ತು. ಪಾಕಿಸ್ತಾನದ ಸೇನಾ ಕೋರ್ಟ್ ತೀರ್ಪಿನ ವಿರುದ್ಧ 2017ರ ಮೇನಲ್ಲಿ ಭಾರತ ಅಂತರರಾಷ್ಟ್ರೀಯ ನ್ಯಾಯಾಲಯದ ಮೆಟ್ಟಿಲೇರಿತ್ತು.
ಅಂತರರಾಷ್ಟ್ರೀಯ ನ್ಯಾಯಾಲಯವು ಕಳೆದ ವರ್ಷ ಜುಲೈನಲ್ಲಿ ನೀಡಿದ್ದ ತೀರ್ಪಿನಲ್ಲಿ, ಜಾಧವ್‌ಗೆ ರಾಜತಾಂತ್ರಿಕ ನೆರವು ನೀಡಲು ಭಾರತಕ್ಕೆ ಅವಕಾಶ ನೀಡುವಂತೆಯೂ ತೀರ್ಪನ್ನು ಪುನರ್ ಪರಿಶೀಲಿಸುವಂತೆಯೂ ಪಾಕಿಸ್ತಾನಕ್ಕೆ ಸೂಚಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.