ADVERTISEMENT

ಆಂಧ್ರಪ್ರದೇಶ ಮುಖ್ಯಮಂತ್ರಿಯಾಗಿ ನಾಳೆ ಚಂದ್ರಬಾಬು ನಾಯ್ಡು ಪ್ರಮಾಣವಚನ

ಪಿಟಿಐ
Published 11 ಜೂನ್ 2024, 11:06 IST
Last Updated 11 ಜೂನ್ 2024, 11:06 IST
ಚಂದ್ರಬಾಬು ನಾಯ್ಡು
ಚಂದ್ರಬಾಬು ನಾಯ್ಡು   

ಅಮರಾವತಿ: ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಅವರು ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ನಾಲ್ಕನೇ ಅವಧಿಗೆ ನಾಳೆ (ಬುಧವಾರ) ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ವಿಜಯವಾಡದ ಹೊರವಲಯದಲ್ಲಿರುವ ಗನ್ನವರಂ ವಿಮಾನ ನಿಲ್ದಾಣದ ಬಳಿ ಇರುವ ಕೆಸರಪಲ್ಲಿ ಐಟಿ ಪಾರ್ಕ್‌ನಲ್ಲಿ ಬೆಳಿಗ್ಗೆ 11.27ಕ್ಕೆ ನಾಯ್ಡು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಟಿಡಿಪಿ ಶಾಸಕಾಂಗ ಪಕ್ಷದ ನಾಯಕರಾಗಿ ಎನ್. ಚಂದ್ರಬಾಬು ನಾಯ್ಡು ಅವರನ್ನು ಆಯ್ಕೆ ಮಾಡಲಾಗಿದೆ. ಜತೆಗೆ, ಇಂದು ನಡೆದ ಎನ್‌ಡಿಎ ಮೈತ್ರಿಪಕ್ಷಗಳ ಶಾಸಕರ ಸಭೆಯಲ್ಲೂ ನಾಯ್ಡು ಅವರನ್ನು ತಮ್ಮ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ.

ADVERTISEMENT

ಟಿಡಿಪಿ, ಬಿಜೆಪಿ ಮತ್ತು ಜನಸೇನಾ ನಾಯಕರನ್ನು ಒಳಗೊಂಡ ಎನ್‌ಡಿಎ ಬಣದ ನಾಯಕರು ರಾಜ್ಯಪಾಲ ಎಸ್.ಅಬ್ದುಲ್ ನಜೀರ್ ಅವರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಎನ್‌ಡಿಎ ಮೈತ್ರಿಕೂಟದ ಇತರ ನಾಯಕರು ಪ್ರಮಾಣವಚನ ಸಮಾರಂಭದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ.

ನಾಯ್ಡು ಅವರೊಂದಿಗೆ ಟಿಡಿಪಿ ಪ್ರಧಾನ ಕಾರ್ಯದರ್ಶಿ, ನಾಯ್ಡು ಅವರ ಪುತ್ರ ನಾರಾ ಲೋಕೇಶ್ ಸೇರಿದಂತೆ ಜನಸೇನಾ ಪಕ್ಷದ ನಾಯಕ ಪವಣ್ ಕಲ್ಯಾಣ್, ಎನ್. ಮನೋಹರ್ ಸೇರಿದಂತೆ ಹಲವು ನಾಯಕರು ಪ್ರಮಾಣ ವಚನ ಸ್ವೀಕರಿಸುವ ನಿರೀಕ್ಷೆ ಇದೆ.

ನಾಯ್ಡು ಅವರು 1995ರಿಂದ 1999, 2004ರಿಂದ 2009 ಹಾಗೂ 2014ರಿಂದ 2019ರ ವರೆಗೆ ಒಟ್ಟು ಮೂರು ಬಾರಿ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿದ್ದರು. 2019ರ ವಿಧಾನಸಭೆ ಚುನಾವಣೆಯಲ್ಲಿ ಟಿಡಿಪಿ ಪಕ್ಷ ಸೋಲು ಕಂಡಿತ್ತು.

ಆಂಧ್ರಪ್ರದೇಶದಲ್ಲಿ ಮೇ 13ರಂದು ಲೋಕಸಭಾ ಚುನಾವಣೆಯ ಜೊತೆಯಲ್ಲೇ ವಿಧಾನಸಭೆಗೂ ಮತದಾನ ನಡೆದಿತ್ತು. ವಿಧಾನಸಭೆಯ 175 ಸ್ಥಾನಗಳ ಪೈಕಿ ಟಿಡಿಪಿ 135, ಜನಸೇನಾ 21, ಬಿಜೆಪಿ 8 ಹಾಗೂ ವೈಎಸ್‌ಆರ್‌ಸಿಪಿ 11 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದವು. ಅದೇ ರೀತಿ 25 ಲೋಕಸಭಾ ಕ್ಷೇತ್ರಗಳ ಪೈಕಿ ಟಿಡಿಪಿ 16, ವೈಎಸ್‌ಆರ್‌ಸಿಪಿ 4, ಬಿಜೆಪಿ 3, ಜನಸೇನಾ 2 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.