ರಾಯಪುರ: ಛತ್ತೀಸಗಢ ವಿಧಾನಸಭೆ ಚುನಾವಣೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು (ಶುಕ್ರವಾರ) ‘ಮೋದಿ ಕಿ ಗ್ಯಾರಂಟಿ 2023’ ಎಂಬ ಶೀರ್ಷಿಕೆಯ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.
ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಡಬಲ್ ಇಂಜಿನ್ ಸರ್ಕಾರ ಅಧಿಕಾರಕ್ಕೆ ಬಂದರೆ, ಮುಂದಿನ ಐದು ವರ್ಷಗಳಲ್ಲಿ ಛತ್ತೀಸಗಡ ಸಂಪೂರ್ಣ ಅಭಿವೃದ್ಧಿ ಹೊಂದಿದ ರಾಜ್ಯವನ್ನಾಗಿ ಮಾಡುತ್ತೇವೆ’ ಎಂದು ಭರವಸೆ ನೀಡಿದ್ದಾರೆ.
‘ಇದು ಕೇವಲ ಪ್ರಣಾಳಿಕೆಯಲ್ಲ, ಇದು ನಂಬಿಕೆಯ ಪತ್ರವಾಗಿದೆ. ಇದು ಛತ್ತೀಸಗಢ ಜನರಿಗೆ ನಾವು ಮಾಡುತ್ತಿರುವ ಪ್ರತಿಜ್ಞೆ, ಸಂಕಲ್ಪವಾಗಿದೆ’ ಎಂದು ಶಾ ಹೇಳಿದ್ದಾರೆ.
ಭರವಸೆಗಳು ಇಂತಿವೆ...
* ಭೂರಹಿತ ರೈತರಿಗೆ ವಾರ್ಷಿಕ ₹10,000 ಅನುದಾನ
* ಎಲ್ಲಾ ವಿವಾಹಿತ ಮಹಿಳೆಯರಿಗೆ ವರ್ಷಕ್ಕೆ ₹12,000 ಸಹಾಯಧನ
* ಕೃಷಿ ಉನ್ನತಿ ಯೋಜನೆ ಆರಂಭ. ಇದರ ಭಾಗವಾಗಿ ಕ್ವಿಂಟಾಲ್ ಭತ್ತವನ್ನು ₹3,100 ದರದಲ್ಲಿ ಖರೀದಿ.
* ಎರಡು ವರ್ಷಗಳಲ್ಲಿ ಒಂದು ಲಕ್ಷ ಹುದ್ದೆಗಳ ಭರ್ತಿ
* ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ 18 ಲಕ್ಷ ಮನೆಗಳ ನಿರ್ಮಾನ.
* ರಾಜ್ಯದ ಪ್ರತಿ ಮನೆಗೂ ನಲ್ಲಿ ನೀರು
* ರಾಜ್ಯದಾದ್ಯಂತ 500 ಜನೌಷಧಿ ಕೇಂದ್ರಗಳನ್ನು ಸ್ಥಾಪನೆ
ಕಾಂಗ್ರೆಸ್ ವಿರುದ್ಧ ವಾಗ್ದಾಳಿ: ಕಾಂಗ್ರೆಸ್‌ನವರು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ರೈತರ ಸಾಲವನ್ನು ಮನ್ನಾ ಮಾಡುವ ಬದಲು ಜನರ ಹಣವನ್ನು ಲೂಟಿ ಮಾಡಿದ್ದಾರೆ. ಅವರು ಸಾರ್ವಜನಿಕ ಹಣವನ್ನು ದುರುಪಯೋಗಪಡಿಸಿಕೊಳ್ಳದಿದ್ದರೆ ಮತ್ತು ಭ್ರಷ್ಟಾಚಾರದಲ್ಲಿ ತೊಡಗದಿದ್ದರೆ ಅವರು ರಾಜ್ಯದಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಬಹುದಿತ್ತು. ನಕ್ಸಲ್ ಚಟುವಟಿಕೆ ಸೇರಿದಂತೆ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಮುಖ್ಯಮಂತ್ರಿ ಭೂಪೇಶ್ ಬಘೆಲ್ ನೇತೃತ್ವದ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ಅಮಿತ್ ಶಾ ಕಿಡಿಕಾರಿದ್ದಾರೆ.
ಎರಡು ಹಂತಗಳಲ್ಲಿ ಚುನಾವಣೆ
90 ಸದಸ್ಯ ಬಲದ ಛತ್ತೀಸಗಢ ವಿಧಾನಸಭೆಗೆ ನವೆಂಬರ್ 7 ಹಾಗೂ 17ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಮೊದಲ ಹಂತದಲ್ಲಿ 20 ಕ್ಷೇತ್ರಗಳಿಗೆ ಮತ್ತು 2ನೇ ಹಂತದಲ್ಲಿ 70 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಡಿಸೆಂಬರ್ 3ರಂದು ಮತ ಎಣಿಕೆ ನಡೆಯಲಿದೆ.
ರಾಜ್ಯದಲ್ಲಿ ಸದ್ಯ ಕಾಂಗ್ರೆಸ್ ಅಧಿಕಾರದಲ್ಲಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಈಗಾಗಲೇ ಅಭ್ಯರ್ಥಿಗಳನ್ನು ಘೋಷಿಸಿವೆ. ರಾಜ್ಯದಲ್ಲಿ ಕಾಂಗ್ರೆಸ್ ನಾಯಕರ ಪರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಪ್ರಮುಖರು ಭರ್ಜರಿ ಪ್ರಚಾರ ನಡೆಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.