ರಾಯ್‌ಗಢ: ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಪ್ರಯಾಣಿಕರು ಮೃತಪಟ್ಟಿದ್ದು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 26 ಮಂದಿ ಗಾಯಗೊಂಡಿರುವ ಘಟನೆ ಛತ್ತೀಸ್‌ಗಢದ ರಾಯ್‌ಗಢ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಿಲ್ಲೆಯ ಲೈಲುಂಗಾ ಪಟ್ಟಣದಿಂದ ರಾಯ್‌ಗಢಕ್ಕೆ ಬಸ್ ತೆರಳುತ್ತಿದ್ದಾಗ, ಚಾರ್ಭಂಟಾ ತಿರುವಿನಲ್ಲಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಗಾಯಗೊಂಡವರಲ್ಲಿ 11 ಮಂದಿಯ ಸ್ಥಿತಿ ಗಂಭೀರವಾಗಿರುವ ಕಾರಣ ರಾಯ್‌ಗಢದ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ. 12 ಮಂದಿಯನ್ನು ಘರ್ಘೋಡಾದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ದೀಪಕ್ ಮಿಶ್ರಾ ತಿಳಿಸಿದ್ದಾರೆ.
ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದು,10 ಮಹಿಳೆಯರು ಮತ್ತು ಇಬ್ಬರು ಮಕ್ಕಳು ಸೇರಿದಂತೆ 26 ಮಂದಿ ಗಾಯಗೊಂಡಿದ್ದರು. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು ಎಂದು ಮಿಶ್ರಾ ಮಾಹಿತಿ ನೀಡಿದರು.
ಮೃತರಲ್ಲಿ ಒಬ್ಬರನ್ನು ಗಿರಿ ಪ್ರಸಾದ್ ನಿಶಾದ್ (26), ಇನ್ನೊಬ್ಬರ ಗುರುತು ಪತ್ತೆಯಾಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ.
ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ನಡೆಸಲಾಗುವುದು ಎಂದು ದೀಪಕ್ ಮಿಶ್ರಾ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.