ಪಟ್ನಾ: ಬಿಹಾರದಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬರುತ್ತಿರುವ ಮಹಾಮೈತ್ರಿ ಕೂಟ (ಮಹಾಘಟಬಂಧನ) ಸರ್ಕಾರದ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳು ನಾಳೆ (ಬುಧವಾರ) ಮಧ್ಯಾಹ್ನ 2 ಗಂಟೆಗೆ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಲಾಲು ಪ್ರಸಾದ್ ನೇತೃತ್ವದ ಆರ್‌ಜೆಡಿಯು ಈ ವಿಷಯವನ್ನು ಸಾಮಾಜಿಕ ಮಾಧ್ಯಮ ಟ್ವೀಟರ್‌ನಲ್ಲಿ ಪ್ರಕಟಿಸಿದೆ.
ನಿತೀಶ್ ಕುಮಾರ್ ಅವರು ಮಂಗಳವಾರ ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಸರ್ಕಾರ ರಚಿಸಲು ಆರ್‌ಜೆಡಿ, ಕಾಂಗ್ರೆಸ್ ಬೆಂಬಲ ನೀಡಿವೆ.
ನೂತನ ಸರ್ಕಾರದಲ್ಲಿ ನಿತೀಶ್ ಕುಮಾರ್ ಅವರೇ ಮುಖ್ಯಮಂತ್ರಿಯಾಗಲಿದ್ದಾರೆ ಎನ್ನಲಾಗಿದ್ದು, ತೇಜಸ್ವಿ ಯಾದವ್ ಅವರು ಉಪ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಗೊತ್ತಾಗಿದೆ.
2014ರ ಲೋಕಸಭೆ ಚುನಾವಣೆಗೆ ನರೇಂದ್ರ ಮೋದಿ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಬಿಜೆಪಿ 2013ರಲ್ಲಿ ಘೋಷಿಸಿತ್ತು. ಈ ಹಿನ್ನೆಲೆಯಲ್ಲಿ ನಿತೀಶ್ ಎನ್‌ಡಿಎಯಿಂದ ಹೊರಬಂದಿದ್ದರು. ನಂತರ, ಆರ್‌ಜೆಡಿ ಮತ್ತು ಕಾಂಗ್ರೆಸ್‌ನೊಂದಿಗೆ ಮಹಾಮೈತ್ರಿಕೂಟ ರಚಿಸಿದ ನಿತೀಶ್, 2015 ರಲ್ಲಿ ಮುಖ್ಯಮಂತ್ರಿಯಾಗಿದ್ದರು. 2017 ರಲ್ಲಿ ಆರ್‌ಜೆಡಿ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿ ಮೈತ್ರಿ ಮುರಿದು, ಮತ್ತೆ ಎನ್‌ಡಿಎ ಸೇರಿದ್ದರು. ಮಹಾಮೈತ್ರಿಕೂಟದಲ್ಲಿ ಉಸಿರುಗಟ್ಟಿಸುವ ವಾತಾವರಣವಿದೆ ಎಂದು ಅವರು ಆರೋಪಿಸಿದ್ದರು.
ಈಗ ಎನ್‌ಡಿಎಯಿಂದ ಹೊರ ಬಂದಿರುವ ಅವರು, ಜೆಡಿಯು ಪಕ್ಷವನ್ನು ಒಡೆಯಲು ಬಿಜೆಪಿ ಮುಂದಾಗಿತ್ತು ಎಂದು ಆರೋಪಿಸಿದ್ದಾರೆ.
ಇವುಗಳನ್ನೂ ಓದಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.