ADVERTISEMENT

ಕೇರಳದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತರುವುದಿಲ್ಲ: ಪಿಣರಾಯಿ ವಿಜಯನ್‌

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 3 ಜೂನ್ 2022, 3:07 IST
Last Updated 3 ಜೂನ್ 2022, 3:07 IST
ಪಿಣರಾಯಿ ವಿಜಯನ್
ಪಿಣರಾಯಿ ವಿಜಯನ್   

ತಿರುವನಂತಪುರ: ಕೇರಳದಲ್ಲಿ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ತಮ್ಮ ಸರ್ಕಾರ ಜಾರಿಗೆ ತರುವುದಿಲ್ಲ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.

ಎಲ್‌ಡಿಎಫ್ ಸರ್ಕಾರದ ಮೊದಲ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ‘ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ನಮ್ಮ ಸರ್ಕಾರವು ಸ್ಪಷ್ಟ ನಿಲುವನ್ನು ಹೊಂದಿದೆ. ಅದು ಮುಂದುವರಿಯುತ್ತದೆ’ ಎಂದು ಸ್ಪಷ್ಟಪಡಿಸಿದ್ದಾರೆ.

‘ದೇಶದಲ್ಲಿ ಜಾತ್ಯತೀತತೆಯನ್ನು ನಾಶಮಾಡುವ ಪ್ರಯತ್ನಗಳು ನಡೆಯುತ್ತಿದ್ದು, ಧರ್ಮದ ಆಧಾರದ ಮೇಲೆ ಪೌರತ್ವವನ್ನು ನಿರ್ಧರಿಸಲಾಗುತ್ತಿದೆ. ಆದರೆ, ನಮ್ಮ ರಾಜ್ಯದಲ್ಲಿ ಧರ್ಮದ ಆಧಾರದ ಮೇಲೆ ಪೌರತ್ವವನ್ನು ನಿರ್ಧರಿಸುವುದಿಲ್ಲ. ಇದು ನಮ್ಮ ಸರ್ಕಾರದ ದೃಢ ನಿಲುವು’ ಎಂದು ತಿಳಿಸಿದ್ದಾರೆ.

ADVERTISEMENT

ಜನರಲ್ಲಿ ಕೋಮು ಉದ್ವಿಗ್ನತೆಯನ್ನು ಉಂಟುಮಾಡಲು ದೇಶದ ವಿವಿಧ ಭಾಗಗಳಲ್ಲಿ ಹಲವಾರು ಸಮೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ‘ಕೇರಳದಲ್ಲಿ ಸಮಾಜದ ಅತ್ಯಂತ ಬಡ ಕುಟುಂಬಗಳನ್ನು ಗುರುತಿಸಲು ಸಮೀಕ್ಷೆಯನ್ನು ಪೂರ್ಣಗೊಳಿಸಲಾಗಿದೆ. ಈ ಸಮೀಕ್ಷೆಯ ಭಾಗವಾಗಿ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ವಿಜಯನ್ ಭರವಸೆ ನೀಡಿದ್ದಾರೆ.

ದೇಶದಲ್ಲಿ ಕೋವಿಡ್‌ ಸಾಂಕ್ರಾಮಿಕ ಕಡಿಮೆಯಾದ ಬಳಿಕ ಪೌರತ್ವ ತಿದ್ದುಪಡಿ ಕಾಯಿದೆ (ಸಿಎಎ) ಜಾರಿಗೆ ತರುತ್ತೇವೆ ಎಂದು ಇತ್ತೀಚೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.