ಜೈಪುರ: ರಾಜಸ್ಥಾನದಲ್ಲಿ ವಿಧಾನಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಜಾತಿ ಸಮೀಕ್ಷೆ ನಡೆಸಲು ಶನಿವಾರ ತಡರಾತ್ರಿ ಆದೇಶ ಹೊರಡಿಸಿದೆ.
ಬಿಹಾರದಲ್ಲಿ ಜಾತಿ ಸಮೀಕ್ಷೆಯ ಬಿಡುಗಡೆ ಮಾಡಿದ ಕೆಲವೇ ದಿನಗಳಲ್ಲಿ ಈ ಆದೇಶ ಬಂದಿದೆ. ಈ ಮೂಲಕ ಜಾತಿ ಸಮೀಕ್ಷೆ ನಡೆಸುತ್ತಿರುವ ದೇಶದ ಎರಡನೇ ರಾಜ್ಯ ಎಂಬ ಹೆಗ್ಗಳಿಕೆಗೆ ರಾಜಸ್ಥಾನ ಪಾತ್ರವಾಗಲಿದೆ. ಈ ವರ್ಷಾಂತ್ಯದಲ್ಲಿ ರಾಜಸ್ಥಾನದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಚುನಾವಣಾ ದಿನಾಂಕ ಇನ್ನಷ್ಟೇ ಪ್ರಕಟವಾಗಬೇಕಿದೆ.
ರಾಜ್ಯ ಸಚಿವ ಸಂಪುಟದ ಅನುಮೋದನೆಯ ನಂತರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ಜಾತಿ ಸಮೀಕ್ಷೆ ನಡೆಸುವ ಕುರಿತು ಆದೇಶ ಹೊರಡಿಸಿದೆ.
ನಾಗರಿಕರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಹಕ್ಕುಗಳಿಗೆ ಸಂಬಂಧಿಸಿದ ಮಾಹಿತಿ ಮತ್ತು ಅಂಕಿಅಂಶಗಳನ್ನು ಸಂಗ್ರಹಿಸಲು ತನ್ನದೇ ಆದ ಸಂಪನ್ಮೂಲಗಳನ್ನು ಬಳಸಿಕೊಳ್ಳಲು ರಾಜಸ್ಥಾನ ಸರ್ಕಾರ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.
ರಾಜಸ್ಥಾನ ಸಿಎಂ ಅಶೋಕ್ ಗೆಹಲೋತ್ ಅವರು ಶನಿವಾರ ಕೋರ್ ಕಮಿಟಿ ಸಭೆ ಬಳಿಕ ಮಾತನಾಡಿ, ರಾಜಸ್ಥಾನದಲ್ಲಿಯೂ ಜಾತಿಗಣತಿ ನಡೆಸಲಾಗುವುದು. ಈ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಗಿದೆ ಎಂದು ಹೇಳಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.