ADVERTISEMENT

ಗ್ಯಾರಂಟಿಗಳ ಪ್ರಯೋಜನ ತಿಳಿಯಲು ಕರ್ನಾಟಕಕ್ಕೆ ಬನ್ನಿ: ಬಿಜೆಪಿ ನಾಯಕರಿಗೆ ಡಿಕೆಶಿ

​ಪ್ರಜಾವಾಣಿ ವಾರ್ತೆ
Published 9 ನವೆಂಬರ್ 2024, 14:59 IST
Last Updated 9 ನವೆಂಬರ್ 2024, 14:59 IST
ಡಿ.ಕೆ.ಶಿವಕುಮಾರ್
ಡಿ.ಕೆ.ಶಿವಕುಮಾರ್   

ಮುಂಬೈ: ‘ಜನರ ಕಲ್ಯಾಣಕ್ಕಾಗಿ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳು ಜನರಿಗೆ ಹೇಗೆ ಪ್ರಯೋಜನವಾಗಿವೆ ಎಂಬುದನ್ನು ತಿಳಿದುಕೊಳ್ಳಲು ಮಹಾರಾಷ್ಟ್ರದ ಆಡಳಿತಾರೂಢ ‘ಮಹಾಯುತಿ’ ಮೈತ್ರಿಕೂಟದ ನಾಯುಕರು ಕರ್ನಾಟಕಕ್ಕೆ ಭೇಟಿ ನೀಡಲಿ’ ಎಂದು ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಶನಿವಾರ ಹೇಳಿದರು.

‘ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಸಂದರ್ಭಗಳಲ್ಲೆಲ್ಲಾ ಸಮಾಜದ ಪ್ರತಿಯೊಂದು ವರ್ಗದ ಕಲ್ಯಾಣ ದೃಷ್ಟಿಯಲ್ಲಿಟ್ಟುಕೊಂಡು ಯೋಜನೆಗಳನ್ನು ಜಾರಿಗೊಳಿಸಿದೆ’ ಎಂದರು.

ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್‌ ಸುಖು, ತೆಲಂಗಾಣ ಮುಖ್ಯಮಂತ್ರಿ ಎ.ರೇವಂತ ರೆಡ್ಡಿ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ADVERTISEMENT

ಹಿಮಾಚಲ ಪ್ರದೇಶ, ತೆಲಂಗಾಣ ಹಾಗೂ ಕರ್ನಾಟಕದಲ್ಲಿ ಚುನಾವಣೆ ಪೂರ್ವದಲ್ಲಿ ನೀಡಿದ್ದ ಭರವಸೆಗಳನ್ನು ಕಾಂಗ್ರೆಸ್‌ ಪಕ್ಷ ಈಡೇರಿಸಿಲ್ಲ ಎಂಬ ಬಿಜೆಪಿಯ ಆರೋಪಗಳಿಗೆ ಈ ಮೂವರು ನಾಯಕರು ತಿರುಗೇಟು ನೀಡಿದರು.

‘ಮತಗಳಿಗಾಗಿ ನಾವು ಕಾರ್ಯಕ್ರಮ ರೂಪಿಸುತ್ತಿಲ್ಲ. ರಾಜ್ಯದ ಅಭಿವೃದ್ಧಿಗಾಗಿ ಯೋಜನೆಗಳನ್ನು ಜಾರಿಗೊಳಿಸುತ್ತೇವೆ. ಮಾಜಿ ಪ್ರಧಾನಿಗಳಾದ ಜವಾಹರಲಾಲ್‌ ನೆಹರೂ ಅವರಿಂದ ಹಿಡಿದು ಮನಮೋಹನ್‌ ಸಿಂಗ್‌ ವರೆಗಿನ ಅವಧಿಯಲ್ಲಿ ಜಾರಿಗೊಳಿಸಿರುವ ಯಾವ ಯೋಜನೆಗಳನ್ನೂ ಸ್ಥಗಿತಗೊಳಿಸಿಲ್ಲ’ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

‘ತೆಲಂಗಾಣದಲ್ಲಿ ಜಾರಿಗೊಳಿಸಿರುವ ಯೋಜನೆಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಸುಳ್ಳು ಹೇಳುತ್ತಿದ್ದಾರೆ. ನಮ್ಮ ಸರ್ಕಾರ 22 ಲಕ್ಷಕ್ಕೂ ಅಧಿಕ ರೈತರ ₹17,869 ಕೋಟಿಯಷ್ಟು ಕೃಷಿ ಸಾಲ ಮನ್ನಾ ಮಾಡಿದೆ’ ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ ರೆಡ್ಡಿ ಹೇಳಿದರು. 

‘ರಾಜ್ಯದಲ್ಲಿ ಜಾರಿಗೊಳಿಸಿರುವ ಹಳೆ ಪಿಂಚಣಿ ಯೋಜನೆಯಿಂದ ಜನರಿಗೆ ಭಾರಿ ಪ್ರಯೋಜನವಾಗಿದೆ. ಹೊಸ ಪಿಂಚಣಿ ಯೋಜನೆಯಡಿ ಈ ಮೊದಲು ತಿಂಗಳಿಗೆ ₹5 ಸಾವಿರ ಪಡೆಯುತ್ತಿದ್ದ ವ್ಯಕ್ತಿ, ಹಳೆ ಪಿಂಚಣಿ ಯೋಜನೆಯಡಿ ₹50 ಸಾವಿರ ಪಡೆಯುತ್ತಿದ್ದಾನೆ’ ಎಂದು ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖ್ವಿಂದರ್‌ ಸಿಂಗ್‌ ಸುಖು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.