ನವದೆಹಲಿ: ಲೋಕಸಭೆ ಚುನಾವಣೆ ಫಲಿತಾಂಶದ ಕುರಿತು ಚರ್ಚಿಸಲು ಜೂನ್ 8 ರಂದು ಕಾಂಗ್ರೆಸ್ ತನ್ನ ಕಾರ್ಯಕಾರಿ ಸಮಿತಿಯ ಸಭೆಯನ್ನು(CWC) ಕರೆದಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸಭೆ ಕರೆಯಲಾಗಿದೆ. ಶನಿವಾರ ಬೆಳಗ್ಗೆ 11ಕ್ಕೆ ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲಿ ಸಭೆ ನಡೆಯಲಿದೆ.
ಲೋಕಸಭೆ ಚುನಾವಣೆ ಫಲಿತಾಂಶದ ಕುರಿತು ಪಕ್ಷದ ನಾಯಕರು ಚರ್ಚೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಕಾಂಗ್ರೆಸ್‌ನ ಪ್ರಮುಖ ನಾಯಕರು ಚರ್ಚೆಯಲ್ಲಿ ಭಾಗವಹಿಸಲಿದ್ದಾರೆ.
ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ 2ನೇ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. 2019ರ ಲೋಕಸಭಾ ಚುನಾವಣೆಯಲ್ಲಿ 52 ಸ್ಥಾನಗಳನ್ನು ಗೆದ್ದಿದ್ದ ಕಾಂಗ್ರೆಸ್, ಈ ಬಾರಿ ತನ್ನ ಸ್ಥಾನವನ್ನು 99ಕ್ಕೆ ಹೆಚ್ಚಿಸಿಕೊಂಡಿದೆ.
10 ವರ್ಷಗಳ ಬಳಿಕ ಲೋಕಸಭೆಯಲ್ಲಿ ಪ್ರತಿಪಕ್ಷದ ನಾಯಕನ ಸ್ಥಾನವನ್ನು ಕಾಂಗ್ರೆಸ್ ಪಡೆಯಲಿದೆ. 2014 ಮತ್ತು 2019ರಲ್ಲಿ ಸದನದಲ್ಲಿ ಅಗತ್ಯವಿರುವ ಒಟ್ಟು ಸ್ಥಾನಗಳು ಶೇ 10ಕ್ಕಿಂತ ಕಡಿಮೆಯಿದ್ದ ಕಾರಣ ಪ್ರತಿಪಕ್ಷದ ನಾಯಕನ ಸ್ಥಾನವನ್ನು ಪಡೆಯುವಲ್ಲಿ ವಿಫಲವಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.