ADVERTISEMENT

ವಿಧಾನಸಭಾ ಚುನಾವಣೆಯಲ್ಲಿ ಪರಿಣಾಮ ಎದುರಿಸಬೇಕಾಗುತ್ತದೆ: ‘ಕೈ’ಗೆ ಜಾರಂಗೆ ಎಚ್ಚರಿಕೆ

ಪಿಟಿಐ
Published 10 ಜೂನ್ 2024, 7:43 IST
Last Updated 10 ಜೂನ್ 2024, 7:43 IST
   

ಜಲ್ನಾ(ಮಹಾರಾಷ್ಟ್ರ): ಮರಾಠ ಸಮುದಾಯದ ಹಿತಾಸಕ್ತಿಗಳ ವಿರುದ್ಧ ಕಾಂಗ್ರೆಸ್ ಮಾತನಾಡುತ್ತಿದ್ದು, ಈ ವರ್ಷಾಂತ್ಯದಲ್ಲಿ ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಇದರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಮರಾಠ ಮೀಸಲಾತಿ ಹೋರಾಟಗಾರ ಮನೋಜ್ ಜಾರಂಗೆ ಎಚ್ಚರಿಕೆ ನೀಡಿದರು.

ಜಾಲ್ನಾದ ಅಂತರವಾಲಿ ಸಾರಥಿ ಗ್ರಾಮದಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಉಪವಾಸದ ಮೂರನೇ ದಿನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮರಾಠ ಸಮುದಾಯದ ಎಲ್ಲರನ್ನು ಕುಂಬಿಗಳೆಂದು ಗುರುತಿಸುವ ಕರಡು ಅಧಿಸೂಚನೆಯನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ಮರಾಠರಿಗೆ ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಶೇ10ರಷ್ಟು ಮೀಸಲಾತಿ ನೀಡಿರುವುದರ ವಿರುದ್ಧ ಕಾಂಗ್ರೆಸ್ ನಾಯಕ ವಿಜಯ ವಡೆಟ್ಟಿವಾರ್ ಟೀಕೆಗಳಿಗೆ ಪ್ರತಿಕ್ರಿಯಿಸಿದ ಜಾರಂಗೆ, ‘ಇತ್ತೀಚಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮರಾಠ ಜನರ ಮತಗಳನ್ನು ಪಡೆದುಕೊಂಡಿತ್ತು. ಈಗ ಅವರು ನಮ್ಮ ಹಿತಾಸಕ್ತಿಗಳಿಗೆ ವಿರುದ್ಧವಾಗಿ ಮಾತನಾಡುತ್ತಿದ್ದಾರೆ. ಇದರ ಪರಿಣಾಮವನ್ನು ಅವರು ವಿಧಾನಸಭಾ ಚುನಾವಣೆಯಲ್ಲಿ ಎದುರಿಸಲಿದ್ದಾರೆ’ ಎಂದರು.

ADVERTISEMENT

ಮರಾಠರಿಗೆ ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಶೇ 10ರಷ್ಟು ಮೀಸಲಾತಿ ನೀಡುವ ಮಸೂದೆಯನ್ನು ಕಳೆದ ವರ್ಷ ಫೆಬ್ರುವರಿಯಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಗಿತ್ತು. ಇದನ್ನು ಕಾಂಗ್ರೆಸ್ ನಾಯಕ ವಿಜಯ್ ವಾಡೆಟ್ಟಿವಾರ್ ಬಲವಾಗಿ ವಿರೋಧಿಸಿದ್ದರು. ಒಬಿಸಿಗಳ ಪಾಲಿನಿಂದ ಮರಾಠರಿಗೆ ಮೀಸಲಾತಿಯನ್ನು ನೀಡಲಾಗುತ್ತಿದೆ ಎಂದು ಆರೋಪಿಸಿದ್ದರು.

ಇತ್ತೀಚೆಗಷ್ಟೇ ನಡೆದ ಲೋಕಸಭೆ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟದ ಭಾಗವಾಗಿ ರಾಜ್ಯದಲ್ಲಿ ಕಾಂಗ್ರೆಸ್ ಸ್ಪರ್ಧಿಸಿದ್ದ 17 ಸ್ಥಾನಗಳ ಪೈಕಿ 13ರಲ್ಲಿ ಗೆಲುವು ಸಾಧಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.