ADVERTISEMENT

ಸಿಎಎ ಹೋರಾಟಕ್ಕೆ ಬೆಂಬಲ: ಕಾಂಗ್ರೆಸ್‌ ಕಾರ್ಯಕಾರಿ ಸಮಿತಿಯಲ್ಲಿ ನಿರ್ಣಯ

​ಪ್ರಜಾವಾಣಿ ವಾರ್ತೆ
Published 11 ಜನವರಿ 2020, 19:45 IST
Last Updated 11 ಜನವರಿ 2020, 19:45 IST
ಚಿತ್ರ: ಪ್ರಕಾಶ್‌ ಶೆಟ್ಟಿ
ಚಿತ್ರ: ಪ್ರಕಾಶ್‌ ಶೆಟ್ಟಿ   

ನವದೆಹಲಿ: ಪೌರತ್ವ (ತಿದ್ದುಪಡಿ) ಕಾಯ್ದೆ ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಪ್ರಕ್ರಿಯೆ ವಿರೋಧಿಸಿ ದೇಶದಾದ್ಯಂತ ಯುವಜನತೆ ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ಸೂಚಿಸಲು ಕಾಂಗ್ರೆಸ್‌ ನಿರ್ಧರಿಸಿದೆ.

ಶನಿವಾರ ಸಂಜೆ ಇಲ್ಲಿ ನಡೆದ ಪಕ್ಷದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಸಂಬಂಧ ಮಹತ್ವದ ನಿರ್ಣಯ ಕೈಗೊಂಡಿರುವ ಪಕ್ಷವು, ಜಮ್ಮು ಮತ್ತು ಕಾಶ್ಮೀರದ ಸ್ಥಿತಿಗತಿ, ಇರಾನ್‌ ಮತ್ತು ಅಮೆರಿಕ ನಡುವಿನ ಘರ್ಷಣೆಯಿಂದ ಉಂಟಾಗಿರುವ ಬೆಳವಣಿಗೆಗಳ ಕುರಿತು ಗಂಭೀರ ಚರ್ಚೆ ನಡೆಸಿತು.

ಕುಸಿಯುತ್ತಿರುವ ಆರ್ಥಿಕತೆ, ಉಲ್ಬಣಿಸುತ್ತಿರುವ ನಿರುದ್ಯೋಗ ಸಮಸ್ಯೆಗಳ ನಿವಾರಣೆ ಬಗ್ಗೆ ಗಮನ ಹರಿಸದ ಕೇಂದ್ರ ಸರ್ಕಾರ ಪೌರತ್ವ (ತಿದ್ದುಪಡಿ) ಕಾಯ್ದೆ ಜಾರಿಗೊಳಿಸುತ್ತಿದೆ. ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿರುವ ಈ ನಡೆಯನ್ನು ಮತ್ತಷ್ಟು ವಿರೋಧಿಸಲು ಪಕ್ಷ ನಿರ್ಧರಿಸಿದೆ ಎಂದು ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ADVERTISEMENT

ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್‌) ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಕುರಿತು ಏಕರೂಪದ ನಿರ್ಧಾರ ಕೈಗೊಳ್ಳುವಂತೆ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪಕ್ಷದ ನೇತೃತ್ವದ ರಾಜ್ಯ ಸರ್ಕಾರಗಳಿಗೆ ಸೂಚಿಸಿದ್ದಾರೆ ಎಂದರು.

ಪೌರತ್ವ (ತಿದ್ದುಪಡಿ) ಕಾಯ್ದೆ ಹಿಂದೆ ಪಡೆಯಬೇಕು ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಹೋರಾಟಕ್ಕೆ ನೀಡಿರುವ ಬೆಂಬಲವನ್ನು ಪಕ್ಷವು ಮುಂದುವರಿಸಲಿದೆ ಎಂದದರು.

ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರದ ಗೃಹ ಸಚಿವ ಅಮಿತ್ ಶಾ ಈ ಸಂಬಂಧ ಪ್ರಚೋದನಕಾರಿ ಹೇಳಿಕೆ ನೀಡುತ್ತಿರುವುದು ಖಂಡನೀಯ. ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳ ಮೇಲೆ ಪೊಲೀಸರೂ ಅನೈತಿಕವಾಗಿ ಬಲಪ್ರಯೋಗ ಮಾಡುತ್ತಿರುವುದು ಕಳವಳಕಾರಿ ಎಂದರು.

ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆದಿರುವುದರಿಂದ ವಿವಾದಕ್ಕೆ ಕಾರಣವಾಗಿರುವ ದೆಹಲಿಯ ಜವಾಹರಲಾಲ್‌ ನೆಹರೂ ವಿಶ್ವವಿದ್ಯಾಲಯದ ಕುಲಪತಿ ಹಾಗೂ ದೆಹಲಿ ಪೊಲೀಸ್‌ ಆಯುಕ್ತರನ್ನು ವಜಾಗೊಳಿಸುವಂತೆ ಪಕ್ಷ ಆಗ್ರಹಿಸುತ್ತದೆ ಎಂದು ಅವರು ಒತ್ತಿಹೇಳಿದರು.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್‌, ಮುಖಂಡರಾದ ಪ್ರಿಯಾಂಕಾ ಗಾಂಧಿ, ಅಂಬಿಕಾ ಸೋನಿ, ಪಿ.ಚಿದಂಬರಂ, ಮಲ್ಲಿಕಾರ್ಜುನ ಖರ್ಗೆ, ಗುಲಾಂ ನಬಿ ಆಜಾದ್‌, ಆನಂದ್‌ ಶರ್ಮಾ, ರಣದೀಪ್‌ ಸುರ್ಜೇವಾಲಾ, ಯುವ ಕಾಂಗ್ರೆಸ್‌ ಅಧ್ಯಕ್ಷ ಶ್ರೀನಿವಾಸ್‌ ಬಿ.ವಿ. ಸಭೆಯಲ್ಲಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.