ಪುಣೆ: ‘ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ವಿರುದ್ಧ ಕಾಂಗ್ರೆಸ್ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ವಾಗ್ದಾಳಿ ನಡೆಸಿದರು.
‘ಒಕ್ಕಲಿಗರ ಮತಗಳನ್ನು ಕಳೆದುಕೊಳ್ಳಬಹುದು ಎಂದು ಕಾಂಗ್ರೆಸ್ ಹೆದರಿತ್ತು. ಆದ್ದರಿಂದಲೇ ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭೆ ಚುನಾವಣೆಯ ಮತದಾನ ಮುಗಿಯುವ ತನಕವೂ ಮೌನವಾಗಿತ್ತು. ಸುಮಾರು ಒಂದು ವರ್ಷದಿಂದಲೂ ಈ ವಿಷಯ ತಿಳಿದಿದ್ದರೂ, ಕಾನೂನು ಕ್ರಮ ಕೈಗೊಂಡಿಲ್ಲ’ ಎಂದು ಇಲ್ಲಿ ನಡೆದ ಸಭೆಯಲ್ಲಿ ಅವರು ಹೇಳಿದರು.
‘ಮಹಿಳೆಯರ ಮೇಲೆ ನಡೆಯುವ ಶೋಷಣೆ, ದೌರ್ಜನ್ಯವನ್ನು ಸಹಿಸುವುದಿಲ್ಲ. ಇದರ ವಿರುದ್ಧ ಒಗ್ಗಟ್ಟಿನಿಂದ ನಿಲ್ಲುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಮೈತ್ರಿ ಪಕ್ಷಕ್ಕೆ ಸಂಬಂಧಿಸಿದ ವಿಷಯ ಇದಾಗಿದ್ದರೂ, ಅದು ಸ್ವೀಕಾರಾರ್ಹವಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದೇವೆ. ಈ ಬಗ್ಗೆ ತನಿಖೆ ನಡೆಸಲಿ’ ಎಂದು ನಿರ್ಮಲಾ ಹೇಳಿದರು.
‘ಕಾಂಗ್ರೆಸ್ ಸರ್ಕಾರದ ಸಚಿವರಿಗೆ ಪೆನ್‌ಡ್ರೈವ್‌ನಲ್ಲಿ ಏನಿದೆ ಎಂಬುದು ತಿಳಿದಿತ್ತು. ಆದರೆ, ಮಹಿಳೆಯರ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ಅವರು ಭಾವಿಸಿರಲಿಲ್ಲ’ ಎಂದು ಸಚಿವರು ಆರೋಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.