ರಾಂಚಿ: ಚುನಾವಣಾ ಆಯೋಗ ಹಾಗೂ ಕೇಂದ್ರೀಯ ತನಿಖಾ ಸಂಸ್ಥೆಗಳು ಬಿಜೆಪಿಯ ನಿಯಂತ್ರಣದಲ್ಲಿವೆ. ಸಂವಿಧಾನ ಅಪಾಯದಲ್ಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಆರೋಪಿಸಿದ್ದಾರೆ.
ವಿಧಾನಸಭೆ ಚುನಾವಣೆಗೆ ಅಣಿಯಾಗುತ್ತಿರುವ ಜಾರ್ಖಂಡ್‌ನ ರಾಜಧಾನಿ ರಾಂಚಿಯಲ್ಲಿ ನಡೆದ 'ಸಂವಿಧಾನ ಸಮ್ಮಾನ ಸಮ್ಮೇಳನ'ದಲ್ಲಿ ಮಾತನಾಡಿದ ರಾಹುಲ್, 'ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಎಲ್ಲ ದಿಕ್ಕುಗಳಿಂದಲೂ ಸಂವಿಧಾನದ ಮೇಲೆ ದಾಳಿ ನಡೆಯುತ್ತಿದೆ. ಅದನ್ನು ರಕ್ಷಣೆ ಮಾಡಬೇಕಿದೆ' ಎಂದು ಕರೆ ನೀಡಿದ್ದಾರೆ.
'ಬಿಜೆಪಿಯು ಚುನಾವಣಾ ಆಯೋಗವನ್ನು, ಕೇಂದ್ರೀಯ ತನಿಖಾ ದಳ (ಸಿಬಿಐ), ಜಾರಿ ನಿರ್ದೇಶನಾಲಯ (ಇ.ಡಿ), ಆದಾಯ ತೆರಿಗೆ ಇಲಾಖೆ, ಆಡಳಿತಶಾಹಿ ಮತ್ತು ನ್ಯಾಯಾಂಗ ವ್ಯವಸ್ಥೆಯನ್ನು ನಿಯಂತ್ರಿಸುತ್ತಿದೆ' ಎಂದು ದೂರಿದ್ದಾರೆ.
'ನಿಧಿ ಹಾಗೂ ಸಂಸ್ಥೆಗಳನ್ನೂ ಬಿಜೆಪಿ ನಿಯಂತ್ರಿಸುತ್ತಿದೆ. ಆದರೆ, ನಾವು ಪ್ರಾಮಾಣಿಕವಾಗಿದ್ದೇವೆ. ಕಾಂಗ್ರೆಸ್ ಪಕ್ಷವು ಹಣದ ಬಲವಿಲ್ಲದೆ ಲೋಕಸಭಾ ಚುನಾವಣೆಯನ್ನು ಎದುರಿಸಿದೆ' ಎಂದು ಒತ್ತಿ ಹೇಳಿದ್ದಾರೆ.
ಲೋಕಸಭೆಯಲ್ಲಿ ವಿರೋಧ ಪಕ್ಷ ನಾಯಕನೂ ಆಗಿರುವ ರಾಹುಲ್, 'ಜಾತಿಗಣತಿಯು ಸಮಾಜಿಕ ಸ್ಥಿತಿ ಅರಿಯಲು ಇರುವ ಮಾಧ್ಯಮ. ಆದರೆ, ಮೋದಿ ಅವರು ಅದನ್ನು ವಿರೋಧಿಸುತ್ತಿದ್ದಾರೆ. ಆದಾಗ್ಯೂ, ಜಾತಿಗಣತಿಯನ್ನು ಮತ್ತು ನ್ಯಾಯಾಂಗ, ಮಾಧ್ಯಮಗಳ ನೆರವಿಲ್ಲದೆ ಮೀಸಲಾತಿ ಮೇಲಿನ ಶೇ 50ರ ಮಿತಿಯನ್ನು ತೆಗೆದುಹಾಕಲಾಗುವುದು. ಅದನ್ನು ತಡೆಯಲು ಯಾವುದೇ ಶಕ್ತಿಗೆ ಸಾಧ್ಯವಿಲ್ಲ' ಎಂದು ವಿಶ್ವಾಸದಿಂದ ಹೇಳಿದ್ದಾರೆ.
ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾದ ಬಳಿಕ ರಾಹುಲ್ ಅವರು ಜಾರ್ಖಂಡ್‌ಗೆ ನೀಡಿದ ಮೊದಲ ಭೇಟಿ ಇದಾಗಿದೆ. ನವೆಂಬರ್ 13 ಹಾಗೂ 20ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, 23ರಂದು ಫಲಿತಾಂಶ ಪ್ರಕಟವಾಗಲಿದೆ.
'ರಾಜ್ಯದ 81 ವಿಧಾನಸಭಾ ಕ್ಷೇತ್ರಗಳ ಪೈಕಿ 70ರಲ್ಲಿ ಕಾಂಗ್ರೆಸ್ ಹಾಗೂ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿವೆ. ಉಳಿದ 11 ಸ್ಥಾನಗಳಲ್ಲಿ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಹಾಗೂ ಎಡ ಪಕ್ಷಗಳು ಪೈಪೋಟಿ ನಡೆಸಲಿವೆ' ಎಂದು ಮುಖ್ಯಮಂತ್ರಿ ಹೇಮಂತ್ ಸೊರೇನ್ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.