ಚಂಡೀಗಢ (ಹರಿಯಾಣ): ಝಜ್ಜರ್ ಜಿಲ್ಲೆಯ ಛರಾ ಗ್ರಾಮದ ಕುಸ್ತಿ ಅಖಾಡಕ್ಕೆ ಇಂದು ಬೆಳಿಗ್ಗೆ ಭೇಟಿ ನೀಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಬಜರಂಗ್ ಪೂನಿಯಾ ಸೇರಿದಂತೆ ಹಲವು ಕುಸ್ತಿಪಟುಗಳೊಂದಿಗೆ ಮಾತುಕತೆ ನಡೆಸಿದರು.
ರಾಹುಲ್ ಅವರು ಛರಾ ಗ್ರಾಮದ 'ವೀರೇಂದ್ರ ಅಖಾಡ'ಕ್ಕೆ ಮುಂಜಾನೆಯೇ ಭೇಟಿ ನೀಡಿದರು ಎಂದು ಹರಿಯಾಣ ಕಾಂಗ್ರೆಸ್‌ನ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.
ಭಾರತೀಯ ಕುಸ್ತಿ ಫೆಡರೇಷನ್‌ಗೆ (ಡಬ್ಲ್ಯುಎಫ್‌ಐ) ಸಂಬಂಧಿಸಿದ ವಿವಾದ ಚಾಲ್ತಿಯಲ್ಲಿರುವಾಗಲೇ ರಾಹುಲ್ ಕುಸ್ತಿಪಟುಗಳನ್ನು ಭೇಟಿಯಾಗಿದ್ದಾರೆ.
ಡಬ್ಲ್ಯುಎಫ್‌ಐ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್‌ಭೂಷಣ್ ಶರಣ್ ಸಿಂಗ್ ಅವರು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದಾರೆ. ಒಲಿಂಪಿಕ್ ಪದಕ ವಿಜೇತ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್, ಬಜರಂಗ್ ಪೂನಿಯಾ ಮತ್ತು ವಿನೇಶಾ ಫೋಗಟ್ ಸೇರಿದಂತೆ ಹಲವು ಕುಸ್ತಿಪಟುಗಳು, ಬ್ರಿಜ್‌ಭೂಷಣ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟಿಸುತ್ತಿದ್ದಾರೆ.
ಏತನ್ಮಧ್ಯೆ ಬ್ರಿಜ್‌ಭೂಷಣ್ ಅವರ ಆಪ್ತ ಸಂಜಯ್ ಸಿಂಗ್ ಡಬ್ಲ್ಯುಎಫ್‌ಐನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.
ಸಂಜಯ್ ಸಿಂಗ್ ಆಯ್ಕೆಗೆ ಪ್ರತಿರೋಧ ವ್ಯಕ್ತಪಡಿಸಿರುವ ಸಾಕ್ಷಿ, ಕುಸ್ತಿಗೆ ಈಗಾಗಲೇ ವಿದಾಯ ಹೇಳಿದ್ದಾರೆ. ಬಜರಂಗ್ ಪೂನಿಯಾ ಮತ್ತು ಡೆಫ್‌ಲಿಂಪಿಕ್ಸ್ ಚಾಂಪಿಯನ್ ವಿರೇಂದರ್ ಸಿಂಗ್ ಯಾದವ್, ಪದ್ಮಶ್ರೀ ಪ್ರಶಸ್ತಿ ವಾಪಸ್ ಮಾಡಿದ್ದಾರೆ.
ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಎರಡು ಬಾರಿ ಪದಕ ಗೆದ್ದಿರುವ ವಿನೇಶಾ ಫೋಗಟ್ ಅವರು ಖೇಲ್ ರತ್ನ ಹಾಗೂ ಅರ್ಜುನ ಪ್ರಶಸ್ತಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಂಗಳವಾರ ವಾಪಸ್ ಮಾಡಿದ್ದಾರೆ. ಅವರು ಪ್ರಧಾನಿಗೆ ಬರೆದಿರುವ ಪತ್ರದಲ್ಲಿ, 'ಕುಸ್ತಿಪಟುಗಳು ಹೋರಾಟ ನಡೆಸುತ್ತಿರುವ ಹೊತ್ತಿನಲ್ಲಿ ಈ ಗೌರವಗಳಿಗೆ ಅರ್ಥವೇ ಇಲ್ಲ' ಎಂದು ಉಲ್ಲೇಖಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.