ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಚುನಾವಣೆಯಲ್ಲಿ ಸಂಸದ ರಾಹುಲ್ ಗಾಂಧಿ ಅವರು ಸ್ಪರ್ಧಿಸುವ ಸಾಧ್ಯತೆ ಇಲ್ಲ ಎಂದು ಪಕ್ಷದ ಮೂಲಗಳು ತಿಳಿಸಿವೆ.
ರಾಹುಲ್ ಗಾಂಧಿ ಅವರು ಸದ್ಯ ‘ಭಾರತ್ ಜೋಡೋ (ಭಾರತ ಒಗ್ಗೂಡಿಸಿ)’ ಯಾತ್ರೆಯಲ್ಲಿ ವ್ಯಸ್ತರಾಗಿದ್ದಾರೆ. ಯಾತ್ರೆಯ ಮಧ್ಯದಲ್ಲಿ ಅವರು ದೆಹಲಿಗೆ ಹಿಂತಿರುಗಲಾರರು ಎಂದು ಕಾಂಗ್ರೆಸ್ ಮೂಲಗಳು ಹೇಳಿರುವುದಾಗಿ ‘ಎಎನ್‌ಐ’ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಸದ್ಯ ‘ಭಾರತ ಒಗ್ಗೂಡಿಸಿ’ ಯಾತ್ರೆ ಕೇರಳದಲ್ಲಿ ಮುಂದುವರಿಯುತ್ತಿದ್ದು, ಸೆಪ್ಟೆಂಬರ್ 29ರಂದು ಕರ್ನಾಟಕ ಪ್ರವೇಶಿಸಲಿದೆ. ಕಾಂಗ್ರೆಸ್ ಅಧ್ಯಕ್ಷ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಸೆಪ್ಟೆಂಬರ್ 30 ಕೊನೆಯ ದಿನವಾಗಿದೆ.
ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ನಾಯಕ ಶಶಿ ತರೂರ್ ಅವರ ಸ್ಪರ್ಧೆಗೆ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಸೋಮವಾರ ಹಸಿರು ನಿಶಾನೆ ತೋರಿದ್ದರು. ಈ ಮಧ್ಯೆ, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಸಹ ಆಕಾಂಕ್ಷಿ ಎಂದು ವರದಿಯಾಗಿದೆ. ರಾಹುಲ್ ಗಾಂಧಿ ಅವರನ್ನೇ ಮತ್ತೊಮ್ಮೆ ಅಧ್ಯಕ್ಷರನ್ನಾಗಿ ಆಯ್ಕೆಮಾಡಬೇಕೆಂದು ಪಕ್ಷದ ಕೆಲವು ಪ್ರಮುಖ ನಾಯಕರು ಒತ್ತಡ ಹೇರಿದ್ದಾರೆ. ಈ ಎಲ್ಲ ಬೆಳವಣಿಗೆಗಳಿಂದ ಚುನಾವಣಾ ಕಣ ರಂಗೇರುವ ನಿರೀಕ್ಷೆ ಇದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.