ನವದೆಹಲಿ: ಲೋಕಸಭೆಯ ವಿರೋಧ ಪಕ್ಷದ ನಾಯಕನ ಹುದ್ದೆಯನ್ನು ಸ್ವೀಕರಿಸುವ ಬಗ್ಗೆ ಹಾಗೂ ಗೆದ್ದಿರುವ 2 ಲೋಕಸಭಾ ಕ್ಷೇತ್ರಗಳ ಪೈಕಿ ಯಾವ ಕ್ಷೇತ್ರವನ್ನು ಉಳಿಸಿಕೊಳ್ಳಬೇಕು ಎನ್ನುವುದರ ಬಗ್ಗೆ ರಾಹುಲ್ ಗಾಂಧಿ ಶೀಘ್ರವೇ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ.
ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಈ ವಿಷಯನ್ನು ತಿಳಿಸಿದರು.
ಲೋಕಸಭೆಯ ವಿರೋಧ ಪಕ್ಷದ ನಾಯಕನ ಹುದ್ದೆಯನ್ನು ಒಪ್ಪಿಕೊಳ್ಳಬೇಕು ಎಂದು ರಾಹುಲ್ ಗಾಂಧಿ ಅವರನ್ನು ಸಿಡಬ್ಲ್ಯುಸಿ ಸಭೆಯಲ್ಲಿ ಸರ್ವಾನುಮತದಿಂದ ಒತ್ತಾಯ ಮಾಡಲಾಯಿತು. ಈ ಬಗ್ಗೆ ಶೀಘ್ರವೇ ನಿರ್ಧಾರ ಮಾಡಿ ತಿಳಿಸುವುದಾಗಿ ರಾಹುಲ್ ಗಾಂಧಿ ಸಭೆಯಲ್ಲಿ ಹೇಳಿದರು ಎಂದು ವೇಣುಗೋಪಾಲ್ ಮಾಹಿತಿ ನೀಡಿದ್ದಾರೆ.
ಗೆದ್ದಿರುವ ಎರಡು ಕ್ಷೇತ್ರಗಳ ಪೈಕಿ (ವಯನಾಡ್ ಹಾಗೂ ರಾಯ್‌ಬರೇಲಿ) ಯಾವ ಕ್ಷೇತ್ರವನ್ನು ರಾಹುಲ್ ಗಾಂಧಿ ಉಳಿಸಿಕೊಳ್ಳಲಿದ್ದಾರೆ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ‘ಜೂನ್ 17ಕ್ಕೂ ಮುನ್ನ ಈ ಬಗ್ಗೆ ಅವರು ನಿರ್ಧರಿಸಲಿದ್ದಾರೆ. 3–4 ದಿನಗಳಲ್ಲಿ ತೀರ್ಮಾನ ಗೊತ್ತಾಗಲಿದೆ’ ಎಂದರು.
ಲೋಕಸಭೆ ಚುನಾವಣೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರ ಪಾತ್ರವನ್ನು ಶ್ಲಾಘಿಸುವ ನಿರ್ಣಯವನ್ನೂ ತೆಗೆದುಕೊಳ್ಳಲಾಯಿತು ಎಂದು ಅವರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.