ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ‘ಇಂಡಿಯಾ’ ಮೈತ್ರಿಕೂಟದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇಂದು ನಡೆದ ‘ಇಂಡಿಯಾ’ ಮೈತ್ರಿಕೂಟದ ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಜೆಡಿಯು ನಾಯಕ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ‘ಇಂಡಿಯಾ’ ಮೈತ್ರಿಕೂಟದ ಸಂಚಾಲಕರಾಗಲು ನಿರಾಕರಿಸಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ರಚಿಸಲಾದ 26 ಪಕ್ಷಗಳ ಮೈತ್ರಿಕೂಟದ ಮಹತ್ವದ ಸಭೆ ಇಂದು (ಶನಿವಾರ) ನಡೆಯಿತು. ಈ ವರ್ಚುವಲ್ ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಸೀತಾರಾಂ ಯೆಚೂರಿ, ಡಿಎಂಕೆ ನಾಯಕ ಸ್ಟಾಲಿನ್ ಸೇರಿದಂತೆ 14 ಪಕ್ಷಗಳ ನಾಯಕರು ಭಾಗವಹಿಸಿದ್ದರು. ಆದರೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಮತ್ತು ಮಹಾರಾಷ್ಟ್ರ ಮಾಜಿ ಸಿಎಂ, ಶಿವಸೇನಾ (ಯುಬಿಟಿ) ನಾಯಕ ಉದ್ಧವ್ ಠಾಕ್ರೆ ಸಭೆಗೆ ಗೈರಾಗಿದ್ದರು.
‘ಇಂಡಿಯಾ’ ಮೈತ್ರಿಕೂಟದ ಪಕ್ಷಗಳ ನಡುವೆ ಸೀಟು ಹಂಚಿಕೆ ಅಂತಿಮಗೊಂಡಿಲ್ಲ. ಸೀಟು ಹಂಚಿಕೆ ಸವಾಲಾಗಿರುವ ಹಿನ್ನೆಲೆಯಲ್ಲಿ ಸಂಚಾಲಕರಾಗಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ ಎಂದು ನಿತೀಶ್ ಕುಮಾರ್ ಹೇಳಿ ಸಂಚಾಲಕರ ಹುದ್ದೆಯನ್ನು ನಿರಾಕರಿಸಿದ್ದಾರೆ ಎಂದು ವರದಿಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.