ವೆರಾವಲ್: ಗುಜರಾತ್‌ನ ಗಿರ್ ಸೋಮನಾಥ ಜಿಲ್ಲೆಯ ವೆರಾವಲ್‌ನಲ್ಲಿ ಹನುಮ ಜಯಂತಿ ಮೆರವಣಿಗೆ ವೇಳೆ ದರ್ಗಾದ ಮೇಲೆ ಕೇಸರಿ ಧ್ವಜ ಹಾರಿಸಿದ ಆರೋಪದಲ್ಲಿ 30 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ವೆರಾವಲ್‌ನ ವಖಾರಿಯಾ ಬಜಾರ್‌ನ ದರ್ಗಾದ ಮೇಲೆ ಕೇಸರಿ ಧ್ವಜ ಹಾರಿಸಲಾಗಿತ್ತು. ಕೃತ್ಯದಲ್ಲಿ ಶಾಮೀಲಾದ ಹಲವರು ಇದನ್ನು ವಿಡಿಯೊ ಮಾಡಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿಯಬಿಟ್ಟಿದ್ದರು ಎಂದು ಗಿರ್ ಸೋಮನಾಥದ ಎಸ್‌ಪಿ ಮನೋಹರ ಸಿನ್ಹ ಜಡೇಜ ಹೇಳಿದ್ದಾರೆ.
‘ವಿಡಿಯೊ ವೈರಲ್ ಆಗುತ್ತಿದ್ದಂತೆ ಎರಡೂ ಕೋಮಿನವರು ಶನಿವಾರ ರಾತ್ರಿ ಗುಂಪುಗೂಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ತೆರಳಿದ ಪೊಲೀಸರು ಗುಂಪನ್ನು ಚದುರಿಸಿ ಪರಿಸ್ಥಿತಿ ನಿಯಂತ್ರಿಸಿದರು. ಸೂಕ್ಷ್ಮ ಪ್ರದೇಶಗಳಲ್ಲಿ ಪಥಸಂಚಲನ ನಡೆಸಲಾಗಿದೆ’ ಎಂದು ಅವರು ಮಾಹಿತಿ ನೀಡಿದ್ದಾರೆ.
ಅನುಮತಿ ಪಡೆಯದೇ ಮೆರವಣಿಗೆ ನಡೆಸಲಾಗಿತ್ತು. ಘಟನೆಗೆ ಸಂಬಂಧಿಸಿ ಎರಡು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.