ಜೈಪುರ: ಅಭ್ಯರ್ಥಿಯೊಬ್ಬರ ನಿಧನದಿಂದಾಗಿ ಮುಂದೂಡಲ್ಪಟ್ಟಿದ್ದ ಕರಣ್‌ಪುರ ವಿಧಾನಸಭಾ ಕ್ಷೇತ್ರದಲ್ಲಿ ಸೋಮವಾರ ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಿದೆ.
ಕ್ಷೇತ್ರದ ವ್ಯಾಪ್ತಿಗೆ ಬರುವ ಜಿಲ್ಲೆಯ ಶ್ರೀಗಂಗಾನಗರದ ಡಾ.ಭೀಮರಾವ್ ಅಂಬೇಡ್ಕರ್ ಸರ್ಕಾರಿ ಕಾಲೇಜಿನಲ್ಲಿ 17 ಕೌಂಟರ್‌ಗಳಲ್ಲಿ ಮತ ಎಣಿಕೆ ನಡೆಯುತ್ತಿದೆ ಮುಖ್ಯ ಚುನಾವಣಾಧಿಕಾರಿ ಪ್ರವೀಣ್ ಗುಪ್ತಾ ತಿಳಿಸಿದ್ದಾರೆ.
ಈ ಕ್ಷೇತ್ರದಲ್ಲಿ ಶುಕ್ರವಾರ (ಜ.5) ಮತದಾನ ನಡೆದಿದ್ದು, ಶೇ81.38ರಷ್ಟು ಮತದಾನವಾಗಿತ್ತು.
ಕಾಂಗ್ರೆಸ್ ಅಭ್ಯರ್ಥಿ ಹಾಗೂ ಆಗಿನ ಶಾಸಕ ಗುರ್ಮೀತ್ ಸಿಂಗ್ ಕೂನರ್ ಅವರ ನಿಧನದಿಂದಾಗಿ ಈ ಕ್ಷೇತ್ರದ ಚುನಾವಣೆಯನ್ನು ಮುಂದೂಡಲಾಗಿತ್ತು. ಕೂನಾರ್ ಅವರ ಪುತ್ರ ರೂಪಿಂದರ್ ಸಿಂಗ್ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿತ್ತು. ಬಿಜೆಪಿಯಿಂದ ಸುರೇಂದ್ರ ಪಾಲ್ ಸಿಂಗ್ ಸ್ಪರ್ಧಿಸಿದ್ದಾರೆ.
ಆದರೆ ಗೆಲ್ಲುವ ಮೊದಲೇ ಸುರೇಂದ್ರ ಪಾಲ್ ಸಿಂಗ್ ಸಂಪುಟ ಸಚಿವರಾಗಿ ಸೇರ್ಪಡೆಗೊಂಡಿದ್ದಾರೆ. ಇದು ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಎಂದು ಕಾಂಗ್ರೆಸ್ ಟೀಕಿಸಿದೆ.
ರಾಜಸ್ಥಾನ ವಿಧಾನಸಭೆಯಲ್ಲಿ ಒಟ್ಟು 200 ಸ್ಥಾನಗಳ ಪೈಕಿ ಉಳಿದ 199 ಸ್ಥಾನಗಳಿಗೆ ನವೆಂಬರ್ 25ರಂದು ಮತದಾನ ನಡೆದಿತ್ತು. 115 ಸ್ಥಾನಗಳಲ್ಲಿ ಜಯ ಗಳಿಸಿದ್ದ ಬಿಜೆಪಿ ಅಧಿಕಾರ ಪಡೆದಿತ್ತು. ಬಿಜೆಪಿಯ ಭಜನ್‌ಲಾಲ್ ಶರ್ಮಾ ಅವರು ಡಿಸೆಂಬರ್ 15 ರಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.