ಮುಂಬೈ: ಕ್ರಿಮಿನಲ್ ಮಾನನಷ್ಟ ಪ್ರಕರಣದಲ್ಲಿ ಹೊಸದಾಗಿ ಮತ್ತು ಹೆಚ್ಚುವರಿ ದಾಖಲೆಗಳನ್ನು ಸಲ್ಲಿಸಲು ಆರ್‌ಎಸ್‌ಎಸ್ ಕಾರ್ಯಕರ್ತನಿಗೆ ಅವಕಾಶ ನೀಡಿರುವ ಜಿಲ್ಲಾ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆದೇಶ ಪ್ರಶ್ನಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಾಂಬೆ ಹೈಕೋರ್ಟ್ ಮೊರೆ ಹೋಗಿದ್ದಾರೆ.
ರಾಹುಲ್ ಗಾಂಧಿ ಸಲ್ಲಿಸಿರುವ ಅರ್ಜಿಯು ನ್ಯಾಯಮೂರ್ತಿ ಎಸ್.ವಿ. ಕೊತ್ವಾಲ್ ಅವರಿದ್ದ ಏಕ ಸದಸ್ಯ ಪೀಠದ ಮುಂದೆ ಸೋಮವಾರ ವಿಚಾರಣೆಗೆ ಬಂದಿತು. ಈಗಾಗಲೇ ಪ್ರಕರಣದ ವಿಚಾರಣೆ ಆಲಿಸಿರುವ ಸಮನ್ವಯ ಪೀಠದ ಮುಂದೆಯೇ ಮೇಲ್ಮನವಿ ಸಲ್ಲಿಸುವಂತೆಯೂ ಏಕ ಸದಸ್ಯ ಪೀಠ ಆದೇಶ ನೀಡಿದೆ.
ದೂರುದಾರ ರಾಜೇಶ್ ಕುಂಟೆ ಅವರಿಗೆ ಈ ಪ್ರಕರಣದಲ್ಲಿ ಯಾವುದೇ ಹೊಸ ದಾಖಲೆಗಳನ್ನು ಸಲ್ಲಿಸಲು ಹೈಕೋರ್ಟ್‌ನ ಮತ್ತೊಂದು ಪೀಠವು 2021ರಲ್ಲಿ ಅವಕಾಶ ನೀಡಿರಲಿಲ್ಲ. ಆದಾಗ್ಯೂ, ಮಹಾರಾಷ್ಟ್ರದ ಠಾಣೆ ಜಿಲ್ಲೆಯ ಭೀವಂಡಿಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಈ ವರ್ಷದ ಜೂನ್‌ನಲ್ಲಿ ಹೊಸ ದಾಖಲೆಗಳನ್ನು ಸಲ್ಲಿಸಲು ರಾಜೇಶ್ ಕುಂಟೆ ಅವರಿಗೆ ಅನುಮತಿಸಿದೆ. ಈ ಹಂತದಲ್ಲಿ ಅನುಮತಿಸಿರುವ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆದೇಶವು ಸಂಪೂರ್ಣ ಕಾನೂನುಬಾಹಿರ ಮತ್ತು ಪೂರ್ವಾಗ್ರಹ ಪೀಡಿತವಾದುದು ಎಂದು ರಾಹುಲ್ ಗಾಂಧಿ ತಮ್ಮ ಅರ್ಜಿಯಲ್ಲಿ ವಾದಿಸಿದ್ದಾರೆ.
ಮಹಾತ್ಮ ಗಾಂಧಿಯ ಹತ್ಯೆಗೆ ಆರ್‌ಎಸ್‌ಎಸ್ (ರಾಷ್ಟ್ರೀಯ ಸ್ವಯಂಸೇವಕ ಸಂಘ) ಕಾರಣ ಎಂದು ರಾಹುಲ್ ಗಾಂಧಿ ಸುಳ್ಳು ಮತ್ತು ಮಾನಹಾನಿಕರ ಹೇಳಿಕೆಗಳನ್ನು ನೀಡಿದ್ದಾರೆ ಎಂದು ರಾಜೇಶ್ ಕುಂಟೆ ಆರೋಪಿಸಿ ಕ್ರಿಮಿನಲ್ ಮಾನನಷ್ಟ ಪ್ರಕರಣ ದಾಖಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.