ಇಂಫಾಲ್: ಮಣಿಪುರದ ಜಿರಿಬಾಮ್ ಜಿಲ್ಲೆಯ ಮೊಂಗ್‌ಬಂಗ್ ಗ್ರಾಮದಲ್ಲಿ ಭಾನುವಾರ ಬೆಳಗ್ಗೆ ಶಂಕಿತ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್ ) ಯೋಧ ಹುತಾತ್ಮರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಿಹಾರ ನಿವಾಸಿ ಅಜಯ್ ಕುಮಾರ್ ಝಾ (43) ಮೃತ ಯೋಧ. ತಲೆಗೆ ಗುಂಡು ತಗುಲಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು. ಘಟನೆಯಲ್ಲಿ ಪೊಲೀಸ್ ಕಾನ್‌ಸ್ಟೆಬಲ್ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಘಟನೆಯನ್ನು ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ತೀವ್ರವಾಗಿ ಖಂಡಿಸಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿನ ಪೋಸ್ಟ್ ಮಾಡಿರುವ ಅವರು, 'ಇಂದು ಜಿರಿಬಾಮ್ ಜಿಲ್ಲೆಯಲ್ಲಿ ಕುಕಿ ಉಗ್ರಗಾಮಿಗಳೆಂದು ಶಂಕಿಸಲಾದ ಸಶಸ್ತ್ರ ಗುಂಪು ನಡೆಸಿದ ದಾಳಿಯಲ್ಲಿ ಸಿಆರ್‌ಪಿಎಫ್ ಸಿಬ್ಬಂದಿಯನ್ನು ಹತ್ಯೆಗೈದಿರುವುದನ್ನು ನಾನು ಬಲವಾಗಿ ಖಂಡಿಸುತ್ತೇನೆ. ಮೃತ ಯೋಧನ ಕುಟುಂಬಕ್ಕೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ' ಎಂದು ಹೇಳಿದ್ದಾರೆ.
ಶನಿವಾರ ರಾತ್ರಿಯೂ ಈ ಗ್ರಾಮದಲ್ಲಿ ಗುಂಡಿನ ಸದ್ದು ಕೇಳಿಬಂದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಭಾನುವಾರ ದಾಳಿ ನಡೆದ ಬಳಿಕ ಪಕ್ಕದ ಬೆಟ್ಟ ಪ್ರದೇಶ ಹಾಗೂ ಮೊಂಗ್‌ಬಂಗ್‌ನಲ್ಲಿ ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗುಂಡಿನ ದಾಳಿಯಲ್ಲಿ ಭದ್ರತಾ ಸಿಬ್ಬಂದಿಗೆ ಸೇರಿದ ವಾಹನಕ್ಕೂ ಹಾನಿಯಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.