ಇಂಫಾಲ: ಶಂಕಿತ ಉಗ್ರಗಾಮಿಗಳಿಂದ 59 ವರ್ಷದ ವ್ಯಕ್ತಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಮಣಿಪುರ ಸರ್ಕಾರವು, ಜಿರಿಬಾಮ್ ಜಿಲ್ಲೆಯಲ್ಲಿ ಅನಿರ್ದಿಷ್ಟಾವಧಿಗೆ ಕರ್ಫ್ಯೂ ಹೇರಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೋಯಬಮ್ ಶರತ್‌ಕುಮಾರ್ ಸಿಂಗ್ ಎಂಬವರ ಹತ್ಯೆಯಾಗಿದ್ದು, ಇದರಿಂದಾಗಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಸ್ಥಳೀಯರು ಪ್ರತಿಭಟನಾ ಮೆರವಣಿಗೆ ಕೈಗೊಂಡಿದ್ದಾರೆ. ಉದ್ರಿಕ್ತರ ಗುಂಪು ಕಟ್ಟಡಗಳಿಗೆ ಬೆಂಕಿ ಹಚ್ಚಿದೆ.
ಸಮಾಜ ವಿರೋಧಿ ಶಕ್ತಿಗಳ ಕಾನೂನುಬಾಹಿರ ಚಟುವಟಿಕೆಗಳಿಂದ ಶಾಂತಿ ಕದಡುವ ಹಾಗೂ ಗಲಭೆ ಉಂಟಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಕರ್ಫ್ಯೂ ಹೇರಲಾಗಿದೆ ಎಂದು ಜಿಲ್ಲಾಧಿಕಾರಿ ಹೊರಡಿಸಿರುವ ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಐದು ಅಥವಾ ಹೆಚ್ಚು ಮಂದಿ ಗುಂಪು ಸೇರುವುದನ್ನು ನಿರ್ಬಂಧಿಸಲಾಗಿದೆ. ಜನರಲ್ಲಿ ಶಾಂತಿ ಕಾಪಾಡುವಂತೆ ಬೇಡಿಕೊಳ್ಳಲಾಗಿದೆ.
ಗುರುವಾರ ಬೆಳಿಗ್ಗೆ ನಾಪತ್ತೆಯಾಗಿದ್ದ ಸೋಯಬಮ್ ಅವರ ಮೃತದೇಹ ಪತ್ತೆಯಾಗಿತ್ತು. ದೇಹದಲ್ಲಿ ಗಾಯವಾಗಿತ್ತು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಮಣಿಪುರದಲ್ಲಿ ನಡೆದ ಜನಾಂಗೀಯ ಹಿಂಸಾಚಾರದಲ್ಲಿ ಈವರೆಗೆ 200ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಸಾವಿರಾರು ಮಂದಿ ಮನೆ ಕಳೆದುಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.