ನವದೆಹಲಿ: ರೀಮಲ್ ಚಂಡಮಾರುತದಿಂದಾಗಿ ಈಶಾನ್ಯ ರಾಜ್ಯಗಳಲ್ಲಿ ಗಾಳಿ ಸಹಿತ ಭಾರಿ ಮಳೆಯಾಗಿದ್ದು, ಪ್ರವಾಹದ ಸ್ಥಿತಿ ನಿರ್ಮಾಣವಾಗಿದೆ. ಭಾರಿ ಪ್ರಮಾಣದ ನಾಶ-ನಷ್ಟ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪರಿಸ್ಥಿತಿಯನ್ನು ಅವಲೋಕನ ಮಾಡಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಬರೆದುಕೊಂಡಿರುವ ಪ್ರಧಾನಿ ಮೋದಿ, 'ದುರದೃಷ್ಟವಶಾತ್ ಅಸ್ಸಾಂ, ಮಣಿಪುರ, ಮೇಘಾಲಯ, ಮಿಜೋರಾಂ, ತ್ರಿಪುರಾ ಮತ್ತು ಪಶ್ಚಿಮ ಬಂಗಾಳದಲ್ಲಿ ರೀಮಲ್ ಚಂಡಮಾರುತದ ನೈಸರ್ಗಿಕ ವಿಕೋಪ ಸಂಭವಿಸಿದೆ. ಸಂಕಷ್ಟ ಎದುರಿಸುತ್ತಿರುವ ಜನರೊಂದಿಗೆ ನಮ್ಮ ಪ್ರಾರ್ಥನೆಯಿದೆ' ಎಂದು ಹೇಳಿದ್ದಾರೆ.
'ಈಗಿನ ಪರಿಸ್ಥಿತಿಯನ್ನು ಅವಲೋಕಿಸಿದ್ದೇನೆ. ಈಶಾನ್ಯ ರಾಜ್ಯಗಳಿಗೆ ಬೇಕಾದ ಎಲ್ಲ ಸಹಾಯವನ್ನು ಕೇಂದ್ರ ಸರ್ಕಾರ ನೀಡುವುದಾಗಿ ಭರವಸೆ ನೀಡಿದ್ದೇನೆ. ಅಲ್ಲದೆ ಪರಿಸ್ಥಿತಿಯನ್ನು ನಿರಂತರವಾಗಿ ಅವಲೋಕನ ಮಾಡುತ್ತಿದ್ದೇವೆ. ತೊಂದರೆಯಲ್ಲಿರುವವರಿಗೆ ಸಹಾಯ ಮಾಡಲು ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ' ಎಂದು ತಿಳಿಸಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಸಹ ಪರಿಸ್ಥಿತಿಯನ್ನು ಅವಲೋಕಿಸಿರುವುದಾಗಿ ಹೇಳಿದ್ದಾರೆ. ಅಲ್ಲದೆ ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಜತೆ ಸಮಾಲೋಚನೆ ನಡೆಸಿರುವುದಾಗಿ ತಿಳಿಸಿದ್ದಾರೆ.
ಕನ್ಯಾಕುಮಾರಿಗೆ ಭೇಟಿಯಲ್ಲಿರುವ ಪ್ರಧಾನಿ ಮೋದಿ, ಎರಡು ದಿನಗಳ ಧ್ಯಾನದಲ್ಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.