ADVERTISEMENT

ತಮಿಳುನಾಡು | ಡಿಎಂಕೆ ಆಡಳಿತದಲ್ಲಿ ದಲಿತರ ಮೇಲೆ ದೌರ್ಜನ್ಯ: ಎಲ್‌. ಮುರುಗನ್‌

ಪಿಟಿಐ
Published 9 ಜುಲೈ 2024, 10:03 IST
Last Updated 9 ಜುಲೈ 2024, 10:03 IST
<div class="paragraphs"><p>ಎಲ್‌. ಮುರುಗನ್‌</p></div>

ಎಲ್‌. ಮುರುಗನ್‌

   

ನವದೆಹಲಿ: ತಮಿಳುನಾಡಿನಲ್ಲಿ ದಲಿತರ ಮೇಲೆ ದೊಡ್ಡ ಪ್ರಮಾಣದಲ್ಲಿ ದೌರ್ಜನ್ಯ ನಡೆಯುತ್ತಿದೆ. ರಾಜ್ಯದಲ್ಲಿ ಡಿಎಂಕೆ ಸರ್ಕಾರದ ಆಡಳಿತದಲ್ಲಿ ರಾಜಕೀಯ ನಾಯಕರು ಕೂಡ ಸುರಕ್ಷಿತವಾಗಿಲ್ಲ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆಯ ರಾಜ್ಯ ಸಚಿವ ಎಲ್‌. ಮುರುಗನ್‌ ಆರೋಪಿಸಿದ್ದಾರೆ.

ರಾಷ್ಟ್ರ ರಾಜಧಾನಿ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘2021ರ ಮೇ ತಿಂಗಳಲ್ಲಿ ಡಿಎಂಕೆ ಅಧಿಕಾರಕ್ಕೆ ಬಂದ ಬಳಿಕ, ತಮಿಳುನಾಡಿನಲ್ಲಿ ದಲಿತರ ಮೇಲಿನ ದೌರ್ಜನ್ಯ ದೊಡ್ಡ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಪ್ರತಿ ವರ್ಷ 2000ಕ್ಕೂ ಹೆಚ್ಚು ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ರಾಜ್ಯದಲ್ಲಿ ದಾಖಲಾಗುತ್ತಿವೆ ಎಂದು ಸಮೀಕ್ಷೆಯೊಂದು ತಿಳಿಸಿದೆ’ ಎಂದು ಹೇಳಿದ್ದಾರೆ.

ADVERTISEMENT

ಇತ್ತೀಚೆಗಷ್ಟೇ ದಲಿತ ನಾಯಕ ಮತ್ತು ಬಿಎಸ್‌ಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಅರ್ಮ್‌ಸ್ಟ್ರಾಂಗ್ ಅವರ ಹತ್ಯೆಯಾಗಿದೆ. ರಾಜ್ಯದಲ್ಲಿ ಡಿಎಂಕೆ ಅಧಿಕಾರದಲ್ಲಿ ರಾಜಕೀಯ ನಾಯಕರೂ ಸುರಕ್ಷಿತವಾಗಿಲ್ಲ. ಪರಿಶಿಷ್ಟ ಜಾತಿಯ ನಾಯಕರು ಮತ್ತು ಜನರು ಭದ್ರತೆ ಹೊಂದಿಲ್ಲ. ಡಿಎಂಕೆ ಆಡಳಿತದಲ್ಲಿ ದೌರ್ಜನ್ಯಕ್ಕೆ ಒಳಗಾಗಿದ್ದಾರೆ ಎಂದು ಮುರುಗನ್‌ ಆರೋಪಿಸಿದ್ದಾರೆ.

ದಲಿತರ ಮೇಲಿನ ದೌರ್ಜನ್ಯ ಕುರಿತು ತಮಿಳುನಾಡು ಬಿಜೆಪಿ ಘಟಕದ ‌ವಿ. ಪಿ ದೊರೈಸ್ವಾಮಿ ನೇತೃತ್ವದ ನಿಯೋಗವು ಇಂದು (ಮಂಗಳವಾರ) ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗ ಮತ್ತು ಮಾನವ ಹಕ್ಕುಗಳ ರಾಷ್ಟ್ರೀಯ ಆಯೋಗಕ್ಕೆ ಮನವಿ ಸಲ್ಲಿಸಲಿದೆ. ದೌರ್ಜನ್ಯ ಸಂಬಂಧ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಿದೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯದಲ್ಲಿ ದಲಿತರ ಮೇಲೆ ದೌರ್ಜನ್ಯ ನಡೆಯುತ್ತಿರುವಾಗ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್‌ ಅವರಿಗೆ ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಮುರುಗನ್‌ ಹೇಳಿದ್ದಾರೆ.

ವಿ. ಪಿ ದೊರೈಸ್ವಾಮಿ ಸೇರಿದಂತೆ ತಮಿಳುನಾಡು ಬಿಜೆಪಿ ಘಟಕದ ಹಿರಿಯ ಅಧಿಕಾರಿಗಳು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.