ಚಂಡೀಗಢ: ಹರಿಯಾಣ ವಿಧಾನಸಭಾ ಚುನಾವಣೆಯ ಹೊಸ್ತಿಲಲ್ಲಿರುವಂತೆಯೇ ಬಿಜೆಪಿ ತೊರೆದಿರುವ ಅಶೋಕ್ ತನ್ವಾರ್ ಕಾಂಗ್ರೆಸ್ ಪಕ್ಷಕ್ಕೆ ಮರಳಿದ್ದಾರೆ.
ಹರಿಯಾಣದ ಮಹೇಂದ್ರಗಢ ಜಿಲ್ಲೆಯಲ್ಲಿ ನಡೆದ ಕಾಂಗ್ರೆಸ್ ಚುನಾವಣಾ ಸಮಾವೇಶದಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಸಮ್ಮುಖದಲ್ಲಿ ಅಶೋಕ್ ತನ್ವಾರ್, ದೇಶದ ಅತ್ಯಂತ ಹಳೆಯ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಈ ವೇಳೆ ಕಾಂಗ್ರೆಸ್ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಉಪಸ್ಥಿತರಿದ್ದರು.
2019ರಲ್ಲಿ ಹರಿಯಾಣದ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಜತೆ ಭುಗಿಲೆದ್ದ ಭಿನ್ನಮತದಿಂದಾಗಿ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಅಶೋಕ್ ತನ್ವಾರ್, ಪಕ್ಷವನ್ನು ತೊರೆದಿದ್ದರು.
ಬಳಿಕ ತೃಣಮೂಲ ಕಾಂಗ್ರೆಸ್‌ಗೆ ಸೇರಿದ್ದ ಅವರು, 2022ರಲ್ಲಿ ಎಎಪಿಗೆ ಸೇರ್ಪಡೆಯಾಗಿದ್ದರು. ವರ್ಷಾರಂಭದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ಅಲ್ಲದೆ ಕಳೆದ ಐದು ವರ್ಷಗಳಲ್ಲಿ ನಾಲ್ಕನೇ ಬಾರಿಗೆ ಪಕ್ಷಾಂತರ ಮಾಡಿದ್ದಾರೆ.
ದಲಿತ ಮುಖಂಡನ ಸೇರ್ಪಡೆಯೊಂದಿಗೆ ಕಾಂಗ್ರೆಸ್‌ಗೆ ಹೆಚ್ಚಿನ ಪ್ರಯೋಜನ ಸಿಗಲಿದೆ ಎಂದು ರಾಜಕೀಯ ತಜ್ಞರು ವಿಶ್ಲೇಷಿಸಿದ್ದಾರೆ.
ಹರಿಯಾಣ ವಿಧಾನಸಭೆ ಚುನಾವಣೆಯ ಬಹಿರಂಗ ಪ್ರಚಾರ ಇಂದು (ಅ.3) ಅಂತ್ಯಗೊಳ್ಳಲಿದ್ದು, ಅಕ್ಟೋಬರ್ 5ರಂದು ಮತದಾನ ನಡೆಯಲಿದೆ. ಅಕ್ಟೋಬರ್ 8ರಂದು ಮತ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.