ಅಮರಾವತಿ: ತಿರುಪತಿ ದೇವಸ್ಥಾನದ ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಬಳಕೆಯಾಗಿರುವ ವಿಷಯ ತಿಳಿದು ನಾನು ವಿಚಲಿತನಾಗಿದ್ದೇನೆ ಎಂದು ಆಂಧ್ರಪ್ರದೇಶ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಹೇಳಿದ್ದಾರೆ.
ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರವು ತಿರುಪತಿ ಲಾಡು ತಯಾರಿಸಲು ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಆರೋಪ ಮಾಡಿರುವ ಬೆನಲ್ಲೇ ಪವನ್ ಕಲ್ಯಾಣ್ ಈ ಹೇಳಿಕೆ ನೀಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, ‘ತಿರುಪತಿ ಬಾಲಾಜಿ ಪ್ರಸಾದದಲ್ಲಿ ಮೀನಿನ ಎಣ್ಣೆ, ಹಂದಿ ಕೊಬ್ಬು ಮತ್ತು ದನದ ಕೊಬ್ಬು ಮಿಶ್ರಣ ಮಾಡಿರುವ ವಿಷಯ ತಿಳಿದು ನಾವೆಲ್ಲರೂ ತೀವ್ರ ವಿಚಲಿತರಾಗಿದ್ದೇವೆ. ಈ ಕುರಿತು ವೈಎಸ್‌ಆರ್‌ಸಿಪಿ ಸರ್ಕಾರ ರಚಿಸಿರುವ ಟಿಟಿಡಿ ಮಂಡಳಿ ಹಲವು ಪ್ರಶ್ನೆಗಳಿಗೆ ಉತ್ತರಿಸಬೇಕಿದೆ’ ಎಂದು ತಿಳಿಸಿದ್ದಾರೆ.
‘ದೇಶದ ದೇವಸ್ಥಾನಗಳಿಗೆ ಸಂಬಂಧಿಸಿದ ಎಲ್ಲ ಸಮಸ್ಯೆಗಳನ್ನು ಪರಿಶೀಲಿಸಲು ರಾಷ್ಟ್ರೀಯ ಮಟ್ಟದಲ್ಲಿ ‘ಸನಾತನ ಧರ್ಮ ರಕ್ಷಣಾ ಮಂಡಳಿ’ ಸ್ಥಾಪಿಸುವ ಸಮಯ ಬಂದಿದೆ. ನೀತಿ ನಿರೂಪಕರು, ಧಾರ್ಮಿಕ ಮುಖ್ಯಸ್ಥರು, ನಾಗರಿಕರು, ಮಾಧ್ಯಮಗಳನ್ನು ಒಳಗೊಂಡಂತೆ ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗಬೇಕು. ಕಲಬೆರಕೆ ಲಾಡುಗಳಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ಬದ್ಧವಾಗಿದೆ’ ಎಂದು ಕಲ್ಯಾಣ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.