ನವದೆಹಲಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ರಾಷ್ಟ್ರರಾಜಧಾನಿಯಲ್ಲಿ ಫೆಬ್ರುವರಿ 13ರಂದು ನಡೆಸಲು ಉದ್ದೇಶಿಸಿರುವ ಪ್ರತಿಭಟನೆ ಹಿನ್ನೆಲೆಯಲ್ಲಿ ದೆಹಲಿಯ ಸಿಂಘು, ಘಾಜಿಪುರ್ ಮತ್ತು ಟಿಕ್ರಿ ಗಡಿ ಪ್ರದೇಶಗಳಲ್ಲಿ ಸಂಚಾರ ನಿರ್ಬಂಧಿಸಿ, ಭದ್ರತೆಯನ್ನು ಹೆಚ್ಚಿಸಲಾಗಿದೆ.
ಪ್ರತಿಭಟನಾಕಾರರು ಬರುವ ವಾಹನಗಳು ನಗರವನ್ನು ಪ್ರವೇಶಿಸದಂತೆ ತಡೆಯಲು ಕಾಂಕ್ರಿಟ್ ತಡೆಗೋಡೆ ಮತ್ತು ಕಬ್ಬಿಣದ ಮೊಳೆಗಳನ್ನು ರಸ್ತೆಗಳಲ್ಲಿ ಅಳವಡಿಸಲಾಗಿದೆ. ಇದರಿಂದಾಗಿ, ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡಿದ್ದು ಪ್ರಯಾಣಿಕರಿಗೆ ತೊಂದರೆಯಾಗಿದೆ.
ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಖಾತ್ರಿಪಡಿಸುವ ಕಾನೂನು ಜಾರಿ ಸೇರಿದಂತೆ ಹಲವು ಬೇಡಿಕಗಳ ಈಡೇರಿಕೆಗೆ ಒತ್ತಾಯಿಸಿ, ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ‘ದೆಹಲಿ ಚಲೊ’ಗೆ ಕರೆ ನೀಡಿವೆ. ದೇಶದ 200ಕ್ಕೂ ಹೆಚ್ಚು ರೈತ ಸಂಘಟನೆಗಳು ಇದಕ್ಕೆ ಬೆಂಬಲ ಸೂಚಿಸಿವೆ.
ದೆಹಲಿ ಪೊಲೀಸ್ ಕಮಿಷನರ್ ಸಂಜಯ್ ಅರೋರಾ ಅವರು, ಹರಿಯಾಣ ಮತ್ತು ಉತ್ತರ ಪ್ರದೇಶದೊಂದಿಗಿನ ನಗರದ ಗಡಿ ಪ್ರದೇಶಗಳಿಗೆ ಭಾನುವಾರವೇ ಭೇಟಿ ನೀಡಿ, ಭದ್ರತಾ ವ್ಯವಸ್ಥೆಯ ಪರಿಶೀಲನೆ ನಡೆಸಿದ್ದಾರೆ.
ಈಗಾಗಲೇ ಬಿಡುಗಡೆ ಮಾಡಲಾಗಿರುವ ಸಂಚಾರ ಮಾರ್ಗಸೂಚಿ ಪ್ರಕಾರ, ಸಿಂಘು ಗಡಿಯಲ್ಲಿ ವಾಣಿಜ್ಯ ವಾಹನಗಳ ಸಂಚಾರದ ಮೇಲೆ ಸೋಮವಾರದಿಂದಲೇ ನಿರ್ಬಂಧ ಹೇರಲಾಗಿದೆ. ಈ ನಿರ್ಬಂಧ ಮಂಗಳವಾರ ಎಲ್ಲ ಮಾದರಿಯ ವಾಹನಗಳಿಗೂ ಅನ್ವಯವಾಗಲಿದೆ ಎಂದು ತಿಳಿಸಲಾಗಿದೆ.
ಸುಮಾರು 5,000ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ರಸ್ತೆ ಬಂದ್ ಮಾಡುವುದಕ್ಕೆ ದೊಡ್ಡದೊಡ್ಡ ಕಂಟೇನರ್‌ಗಳನ್ನು ಮತ್ತು ಕಾಂಕ್ರಿಟ್ ತಡೆಗೋಡೆ ಸಾಗಿಸಲು ಕ್ರೇನ್‌ಗಳನ್ನು ನಿಯೋಜಿಸಲಾಗಿದೆ.
ರೈತರು ರಾಜಧಾನಿ ಪ್ರವೇಶಿಸದಂತೆ ನೋಡಿಕೊಳ್ಳಲು ಈಗಾಗಲೇ ಬಹುಪದರ ಬ್ಯಾರಿಕೇಡ್‌ಗಳು, ಮುಳ್ಳುತಂತಿಗಳನ್ನು ಅಳವಡಿಸಲಾಗಿದೆ. ಏತನ್ಮಧ್ಯೆ, ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಈಶಾನ್ಯ ದೆಹಲಿ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.