ನವದೆಹಲಿ: ದೆಹಲಿ ಅಬಕಾರಿ ನೀತಿಯ ಹಣ ಅಕ್ರಮ ವರ್ಗಾವಣೆಗೆ ಸಂಬಂಧಿಸಿದಂತೆ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಜಾರಿ ನಿರ್ದೇಶನಾಲಯದ (ಇ.ಡಿ) ಕ್ರಮವನ್ನು ಪ್ರಶ್ನಿಸಿ ಇಂದು (ಶನಿವಾರ) ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಪ್ರಕರಣ ಸಂಬಂಧ ಶುಕ್ರವಾರ ವಿಶೇಷ ನ್ಯಾಯಾಲಯವು ನೀಡಿದ್ದ ಆದೇಶ ಪ್ರಶ್ನಿಸಿ ಕೇಜ್ರಿವಾಲ್ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ಸುದ್ದಿಸಂಸ್ಥೆ ‘ಎಎನ್‌ಐ’ ವರದಿ ಮಾಡಿದೆ.
‘ದೆಹಲಿ ಹೈಕೋರ್ಟ್‌ನಲ್ಲಿ ಸಲ್ಲಿಸಲಾದ ಅರ್ಜಿಯಲ್ಲಿ ಕೇಜ್ರಿವಾಲ್ ಅವರ ಬಂಧನ ಮತ್ತು ಇ.ಡಿ ಕಸ್ಟಡಿಗೆ ನೀಡಿರುವ ಆದೇಶ ಕಾನೂನುಬಾಹಿರವಾಗಿದೆ. ಕೂಡಲೇ ಕೇಜ್ರಿವಾಲ್ ಅವರನ್ನು ಬಿಡುಗಡೆ ಮಾಡಬೇಕು. ಜತೆಗೆ ಮಾರ್ಚ್ 24ರೊಳಗೆ (ಭಾನುವಾರ) ಹಂಗಾಮಿ ಮುಖ್ಯ ನ್ಯಾಯಾಧೀಶರಿಂದ ಪ್ರಕರಣದ ತುರ್ತು ವಿಚಾರಣೆ ನಡೆಸುವಂತೆ ಕೋರಲಾಗಿದೆ’ ಎಂದು ಕೇಜ್ರಿವಾಲ್ ಪರ ಕಾನೂನು ಸಲಹೆಗಾರರ ತಂಡ ತಿಳಿಸಿದೆ.
ಹಗರಣದಲ್ಲಿ ಬಂಧನಕ್ಕೆ ಒಳಗಾಗಿರುವ ಅರವಿಂದ ಕೇಜ್ರಿವಾಲ್ ಅವರನ್ನು ವಿಶೇಷ ನ್ಯಾಯಾಲಯವು ಇದೇ 28ರವರೆಗೆ ಜಾರಿ ನಿರ್ದೇಶನಾಲಯದ (ಇ.ಡಿ) ವಶಕ್ಕೆ ನೀಡಿತ್ತು.
ಇ.ಡಿ. ಹಾಗೂ ಕೇಜ್ರಿವಾಲ್ ಪರ ವಕೀಲರ ವಾದವನ್ನು ಆಲಿಸಿದ್ದ ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು ಈ ಆದೇಶ ನೀಡಿದ್ದರು.
ಅಬಕಾರಿ ನೀತಿ ಹಗರಣದಲ್ಲಿ ಅರವಿಂದ ಕೇಜ್ರಿವಾಲ್ ಅವರು ಪ್ರಮುಖ ಸಂಚುಕೋರ. ಅವರು ಅಬಕಾರಿ ನೀತಿ ರೂಪಿಸುವ ಕಾರ್ಯದಲ್ಲಿ ನೇರವಾಗಿ ಭಾಗಿಯಾಗಿದ್ದರು. ಜತೆಗೆ, ಅವರು ಪಕ್ಷದ ಮುಖ್ಯಸ್ಥರು ಎಂದು ಜಾರಿ ನಿರ್ದೇಶನಾಲಯ ಹೇಳಿದೆ.
ಇ.ಡಿ. ಪರ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ.ರಾಜು, ‘2021–22ರ ದೆಹಲಿ ಅಬಕಾರಿ ನೀತಿ ರೂಪಿಸಲು ಹಾಗೂ ಅನುಷ್ಠಾನಗೊಳಿಸಲು ಕೇಜ್ರಿವಾಲ್ ಅವರು ‘ಸೌತ್ ಗ್ರೂಪ್’ನಿಂದ (ಬಂಧಿತ ಬಿಆರ್‌ಎಸ್ ನಾಯಕಿ ಕೆ.ಕವಿತಾ ಹಾಗೂ ಇತರ ಹಲವು ಮಂದಿಯನ್ನು ಒಳಗೊಂಡಿರುವ ಕಂಪನಿ) ಹಲವಾರು ಕೋಟಿ ಕಿಕ್ ಬ್ಯಾಕ್ ಪಡೆದಿದ್ದಾರೆ’ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.