ADVERTISEMENT

13 ಅಕ್ರಮ ಕೋಚಿಂಗ್ ಸೆಂಟರ್‌ಗಳಿಗೆ ಬೀಗ ಜಡಿದ ದೆಹಲಿ ಮಹಾನಗರ ಪಾಲಿಕೆ

ಪಿಟಿಐ
Published 29 ಜುಲೈ 2024, 5:28 IST
Last Updated 29 ಜುಲೈ 2024, 5:28 IST
<div class="paragraphs"><p>‘ರಾವ್ಸ್ ಐಎಎಸ್‌ ಸ್ಟಡಿ ಸರ್ಕಲ್‌’ ಕಟ್ಟಡ ಬಳಿ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ</p></div>

‘ರಾವ್ಸ್ ಐಎಎಸ್‌ ಸ್ಟಡಿ ಸರ್ಕಲ್‌’ ಕಟ್ಟಡ ಬಳಿ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ

   

–ಪಿಟಿಐ ಚಿತ್ರ

ನವದೆಹಲಿ: 13 ಅಕ್ರಮ ಕೋಚಿಂಗ್ ಸೆಂಟರ್‌ಗಳ ವಿರುದ್ಧ ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಅಧಿಕಾರಿಗಳು ಕ್ರಮ ಜರುಗಿಸಿದ್ದಾರೆ. ಜತೆಗೆ ಓಲ್ಡ್‌ ರಾಜೇಂದ್ರ ನಗರದಲ್ಲಿರುವ ‘ರಾವ್ಸ್ ಐಎಎಸ್‌ ಸ್ಟಡಿ ಸರ್ಕಲ್‌’ ಕಟ್ಟಡದ ನೆಲಮಹಡಿಗೆ ನೀರು ನುಗ್ಗಿ ಮೂವರು ವಿಧ್ಯಾರ್ಥಿಗಳು ಸಾವು ಪ್ರಕರಣ ಸಂಬಂಧ ತನಿಖೆ ನಡೆಸಲು ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ADVERTISEMENT

ನೆಲಮಹಡಿಯನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುವ ಎಲ್ಲ ಕೋಚಿಂಗ್‌ ಸೆಂಟರ್‌ಗಳು ಮತ್ತು ಶಿಕ್ಷಣ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದೆಹಲಿ ಮೇಯರ್‌ ಶೆಲ್ಲಿ ಒಬೆರಾಯ್‌ ಅವರು ಮಹಾನಗರ ಪಾಲಿಕೆ ಆಯುಕ್ತರಿಗೆ ಸೂಚಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಕಾನೂನುಬಾಹಿರವಾಗಿ ನಡೆಸುತ್ತಿರುವ ಕೋಚಿಂಗ್ ಸೆಂಟರ್‌ಗಳ ವಿರುದ್ಧ ಕ್ರಮ ತೆಗೆದುಕೊಳ್ಳಲು ಅಧಿಕಾರಿಗಳು ಮುಂದಾಗಿದ್ದಾರೆ. ಭಾನುವಾರ ತಡರಾತ್ರಿಯವರೆಗೆ ನಡೆದ ಕಾರ್ಯಾಚರಣೆಯಲ್ಲಿ ಸುಮಾರು 13 ಕೋಚಿಂಗ್ ಸೆಂಟರ್‌ಗಳನ್ನು ಬಂದ್ ಮಾಡಲಾಗಿದೆ ಎಂದು ಸರ್ಕಾರ ತಿಳಿಸಿದೆ.

ನಿಯಮಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಐಎಎಸ್ ಗುರುಕುಲ, ಚಾಹಲ್ ಅಕಾಡೆಮಿ, ಪ್ಲುಟಸ್ ಅಕಾಡೆಮಿ, ಸಾಯಿ ಟ್ರೇಡಿಂಗ್, ಐಎಎಸ್ ಸೇತು, ಟಾಪರ್ಸ್ ಅಕಾಡೆಮಿ, ದೈನಿಕ್ ಸಂವಾದ್, ಸಿವಿಲ್ಸ್ ಡೈಲಿ ಐಎಎಸ್, ಕೆರಿಯರ್ ಪವರ್, 99 ನೋಟ್ಸ್‌, ವಿದ್ಯಾ ಗುರು, ಗೈಡೈನ್ಸ್‌ ಐಎಎಸ್ ಸೇರಿದಂತೆ ಒಟ್ಟು 13 ಕೋಚಿಂಗ್ ಸೆಂಟರ್‌ಗಳನ್ನು ಬಂದ್‌ ಮಾಡಲಾಗಿದ್ದು, ನೋಟಿಸ್ ಅಂಟಿಸಲಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಕಳೆದ ವರ್ಷ ಉತ್ತರ ದೆಹಲಿಯ ಮುಖರ್ಜಿ ನಗರದ ಕೋಚಿಂಗ್ ಇನ್‌ಸ್ಟಿಟ್ಯೂಟ್‌ನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿತ್ತು. ಘಟನೆ ಬೆನ್ನಲ್ಲೇ ಎಸಿಡಿ ಕೋಚಿಂಗ್ ಸೆಂಟರ್‌ಗಳ ಸಮೀಕ್ಷೆಯನ್ನು ನಡೆಸಿತ್ತು.

ಶನಿವಾರ ನಡೆದ ದುರ್ಘಟನೆಯಲ್ಲಿ ಮೃತಪಟ್ಟವರನ್ನು ಕೇರಳದ ಎರ್ನಾಕುಳಂ ಜಿಲ್ಲೆಯ ನವೀನ್‌ ಡೆಲ್ವಿನ್ (29), ತೆಲಂಗಾಣದಲ್ಲಿ ನೆಲೆಸಿರುವ ಬಿಹಾರದ ಔರಂಗಾಬಾದ್‌ನ ತಾನ್ಯಾ ಸೋನಿ (21) ಮತ್ತು ಉತ್ತರ ಪ್ರದೇಶದ ಶ್ರೇಯಾ ಯಾದವ್‌ ಎಂದು ಗುರುತಿಸಲಾಗಿದೆ. ಈ ಮೂವರೂ ನಾಗರಿಕ ಸೇವಾ ಪರೀಕ್ಷೆಗಾಗಿ ಸಿದ್ಧತೆ ನಡೆಸುತ್ತಿದ್ದರು.

ತಾನ್ಯಾ ಅವರು ದೆಹಲಿ ವಿಶ್ವವಿದ್ಯಾಲಯದ ಮಹಾರಾಜಾ ಅಗ್ರಸೇನ್‌ ಕಾಲೇಜಿನ ವಿದ್ಯಾರ್ಥಿನಿ ಆಗಿದ್ದು, ಒಂದೂವರೆ ತಿಂಗಳ ಹಿಂದೆಯಷ್ಟೇ ರಾವ್ಸ್ ಕೋಚಿಂಗ್ ಸೆಂಟರ್‌ಗೆ ಸೇರಿಕೊಂಡಿದ್ದರು.

ನವೀನ್‌ ಅವರು ಜವಾಹರಲಾಲ್‌ ನೆಹರೂ ವಿಶ್ವವಿದ್ಯಾಲಯದಲ್ಲಿ ಪಿಎಚ್‌.ಡಿ ಮಾಡುತ್ತಿದ್ದು, ಕೋಚಿಂಗ್‌ ಸೆಂಟರ್‌ನಲ್ಲಿ ಎಂಟು ತಿಂಗಳಿನಿಂದ ತರಬೇತಿ ಪಡೆಯುತ್ತಿದ್ದಾರೆ. ಬಿಎಸ್‌ಸಿ (ಕೃಷಿ) ವ್ಯಾಸಂಗ ಮಾಡಿರುವ ಶ್ರೇಯಾ, ಎರಡು ತಿಂಗಳ ಹಿಂದೆ ತರಬೇತಿ ಕೇಂದ್ರಕ್ಕೆ ಸೇರಿಕೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.