ನವದೆಹಲಿ: ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಂದ ಬಂಧನಕ್ಕೊಳಗಾಗಿರುವ ಭಾರತೀಯ ರಾಷ್ಟ್ರ ಸಮಿತಿ (ಬಿಆರ್‌ಎಸ್) ಪಕ್ಷದ ನಾಯಕಿ ಕೆ.ಕವಿತಾ ಅವರಿಗೆ ಇಲ್ಲಿನ ನ್ಯಾಯಾಲಯ ಮಧ್ಯಂತರ ಜಾಮೀನು ನೀಡಲು ನಿರಾಕರಿಸಿದೆ.
ಕವಿತಾ ಅವರ ಅರ್ಜಿಯನ್ನು ತಿರಸ್ಕರಿಸಿರುವ ವಿಶೇಷ ನ್ಯಾ. ಕಾವೇರಿ ಬವೇಜಾ, ತನಿಖೆಯ ಈ ಹಂತದಲ್ಲಿ ಮಧ್ಯಂತರ ಜಾಮೀನು ನೀಡುವುದು ಸೂಕ್ತವಲ್ಲ ಎಂದಿದ್ದಾರೆ.
ಜಾಮೀನಿಗಾಗಿ ಕೋರ್ಟ್ ಮೆಟ್ಟಿಲೇರಿದ್ದ ಕವಿತಾ, ತಮ್ಮ 16 ವರ್ಷದ ಮಗನಿಗೆ ಪರೀಕ್ಷೆ ಇದೆ. ತಾಯಿಯಾಗಿ ಆತನಿಗೆ 'ನೈತಿಕ ಹಾಗೂ ಭಾವನಾತ್ಮಕ ಬೆಂಬಲ' ನೀಡಬೇಕಿದೆ ಎಂದು ಮನವಿ ಮಾಡಿದ್ದರು.
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಇ.ಡಿ, ಕವಿತಾ ಅವರು ಸಾಕ್ಷ್ಯ ನಾಶ ಮಾಡಲು ಹಾಗೂ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಲುವಾಗಿ ಜಾಮೀನು ಕೋರುತ್ತಿದ್ದಾರೆ ಎಂದು ಕೋರ್ಟ್‌ಗೆ ತಿಳಿಸಿದೆ.
ದೆಹಲಿ ಸರ್ಕಾರ ಸದ್ಯ ಹಿಂಪಡೆದಿರುವ 'ಅಬಕಾರಿ ನೀತಿ' ಜಾರಿ ವೇಳೆ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ. ಅಧಿಕಾರಿಗಳು ಕವಿತಾ ಅವರನ್ನು ಹೈದರಾಬಾದ್‌ನ ಬಂಜಾರ ಹಿಲ್ಸ್ ನಿವಾಸದಲ್ಲಿ ಮಾರ್ಚ್ 15ರಂದು ಬಂಧಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.