ನವದೆಹಲಿ: ಸರ್ಕಾರಿ ಬಸ್‌ಗಳಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗೆ ದೆಹಲಿ ಸರ್ಕಾರ ಉಚಿತ ಪ್ರಯಾಣದ ಸೌಕರ್ಯವನ್ನು ನೀಡಲಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೋಮವಾರ ಘೋಷಿಸಿದ್ದಾರೆ.
ಈ ಕುರಿತು ಶೀಘ್ರವೇ ಸಚಿವ ಸಂಪುಟದಲ್ಲಿ ಪ್ರಸ್ತಾವನೆ ಸಲ್ಲಿಸಿ ಯೋಜನೆ ಜಾರಿಗೊಳಿಸಲಾಗುವುದು ಎಂದು ಅವರು ಹೇಳಿದ್ದಾರೆ.
ನಮ್ಮ ಸಮಾಜದಲ್ಲಿ, ಲಿಂಗತ್ವ ಅಲ್ಪಸಂಖ್ಯಾತರನ್ನು ನಿರ್ಲಕ್ಷಿಸಲಾಗುತ್ತದೆ. ಹೀಗೆ ಆಗಬಾರದು. ಅವರು ಕೂಡ ಮನುಷ್ಯರು. ಅವರಿಗೂ ಸಮಾನ ಹಕ್ಕುಗಳಿವೆ ಎಂದು ಮುಖ್ಯಮಂತ್ರಿ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
‘ದೆಹಲಿ ಸರ್ಕಾರ ಸರ್ಕಾರಿ ಬಸ್ (ಡಿಟಿಸಿ, ಕ್ಲಸ್ಟರ್)ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಯೋಜನೆ ರೂಪಿಸಲಿದೆ. ಶೀಘ್ರದಲ್ಲೇ ಇದನ್ನು ಸಚಿವ ಸಂಪುಟದಲ್ಲಿ ಅಂಗೀಕರಿಸಿ ಜಾರಿಗೊಳಿಸಲಾಗುವುದು. ಈ ಕ್ರಮದಿಂದ ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದ ಜನರು ಹೆಚ್ಚು ಪ್ರಯೋಜನ ಪಡೆಯುತ್ತಾರೆ ಎಂಬ ನಂಬಿಕೆ ನನಗಿದೆ' ಎಂದೂ ಅವರು ಹೇಳಿದ್ದಾರೆ.
ರಾಷ್ಟ್ರ ರಾಜಧಾನಿಯಲ್ಲಿ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಈಗಾಗಲೇ ಉಚಿತ ಪ್ರಯಾಣ ಸೌಕರ್ಯವನ್ನು ಒದಗಿಸಲಾಗಿದೆ. 2019ರ ಅಕ್ಟೋಬರ್‌ನಲ್ಲಿಯೇ ಈ ಯೋಜನೆಯನ್ನು ಜಾರಿಗೊಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.