ನವದೆಹಲಿ: ಆಪಾದಿತ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಜಾರಿ ನಿರ್ದೇಶನಾಲಯದ (ಇ.ಡಿ) ಕ್ರಮವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯನ್ನು ದೆಹಲಿ ಹೈಕೋರ್ಟ್ ಬುಧವಾರ (ನಾಳೆ) ವಿಚಾರಣೆ ನಡೆಸಲಿದೆ.
ಇ.ಡಿಯಿಂದ ಕೇಜ್ರಿವಾಲ್ ಅವರ ಬಂಧನ 'ಕಾನೂನುಬಾಹಿರ'. ತಕ್ಷಣ ಅವರನ್ನು ಬಿಡುಗಡೆ ಮಾಡುವಂತೆ ಕೋರಿ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಸ್ವರ್ಣಕಾಂತಾ ಶರ್ಮಾ ಅವರಿರುವ ಪೀಠವು ಬುಧವಾರ ಬೆಳಿಗ್ಗೆ 10.30ಕ್ಕೆ ವಿಚಾರಣೆ ನಡೆಸಲಿದೆ.
ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇಜ್ರಿವಾಲ್ ಅವರನ್ನು ಮಾರ್ಚ್ 21ರಂದು ಜಾರಿ ನಿರ್ದೇಶನಾಲಯ ಬಂಧಿಸಿದೆ. ಬಳಿಕ ಅವರನ್ನು ಮಾರ್ಚ್ 28ರವರೆಗೆ ಇ.ಡಿ ಕಸ್ಟಡಿಗೆ ನೀಡಿ ದೆಹಲಿ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.
ಬಂಧನ ಪ್ರಶ್ನಿಸಿ ಕೇಜ್ರಿವಾಲ್ ಕಳೆದ ವಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ದೆಹಲಿ ಹೈಕೋರ್ಟ್‌ನಲ್ಲಿ ಸಲ್ಲಿಸಲಾದ ಅರ್ಜಿಯಲ್ಲಿ ಕೇಜ್ರಿವಾಲ್ ಅವರ ಬಂಧನ ಮತ್ತು ಇ.ಡಿ ಕಸ್ಟಡಿಗೆ ನೀಡಿರುವ ಆದೇಶ ಕಾನೂನುಬಾಹಿರವಾಗಿದೆ. ಕೂಡಲೇ ಕೇಜ್ರಿವಾಲ್ ಅವರನ್ನು ಬಿಡುಗಡೆ ಮಾಡಬೇಕು. ಜತೆಗೆ ಮಾರ್ಚ್ 24ರೊಳಗೆ ಹಂಗಾಮಿ ಮುಖ್ಯ ನ್ಯಾಯಾಧೀಶರಿಂದ ಪ್ರಕರಣದ ತುರ್ತು ವಿಚಾರಣೆ ನಡೆಸುವಂತೆ ಕೋರಲಾಗಿತ್ತು. ಆದರೆ ತುರ್ತು ವಿಚಾರಣೆಗೆ ಅವರ ಮನವಿಯನ್ನು ತಿರಸ್ಕರಿಸಲಾಗಿತ್ತು.
ಅಬಕಾರಿ ನೀತಿ ಹಗರಣದಲ್ಲಿ ಅರವಿಂದ ಕೇಜ್ರಿವಾಲ್ ಅವರು ಪ್ರಮುಖ ಸಂಚುಕೋರ. ಅವರು ಅಬಕಾರಿ ನೀತಿ ರೂಪಿಸುವ ಕಾರ್ಯದಲ್ಲಿ ನೇರವಾಗಿ ಭಾಗಿಯಾಗಿದ್ದರು. ಜತೆಗೆ, ಅವರು ಪಕ್ಷದ ಮುಖ್ಯಸ್ಥರು ಎಂದು ಜಾರಿ ನಿರ್ದೇಶನಾಲಯ ಆರೋಪಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.