ADVERTISEMENT

EDಯಿಂದ ಮಾಹಿತಿ ಸೋರಿಕೆ ಆರೋಪ: ಮಹುವಾ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 23 ಫೆಬ್ರುವರಿ 2024, 11:55 IST
Last Updated 23 ಫೆಬ್ರುವರಿ 2024, 11:55 IST
<div class="paragraphs"><p>ಮಹುವಾ ಮೊಯಿತ್ರಾ</p></div>

ಮಹುವಾ ಮೊಯಿತ್ರಾ

   

ನವದೆಹಲಿ: ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ) ಅಡಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯದ ವಿಚಾರಣೆ ಕುರಿತು ಟಿಎಂಸಿ ನಾಯಕಿ ಹಾಗೂ ಉಚ್ಚಾಟಿತ ಸಂಸದೆ ಮಹುವಾ ಮೊಯಿತ್ರಾ ಅವರು ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಇಂದು (ಶುಕ್ರವಾರ) ವಜಾಗೊಳಿಸಿದೆ.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುಬ್ರಮಣ್ಯಂ ಪ್ರಸಾದ್ ಅವರ ಏಕಸದಸ್ಯ ಪೀಠವು, ’ಜಾರಿ ನಿರ್ದೇಶನಾಲಯವು ಯಾವುದೇ ಪತ್ರಿಕಾ ಪ್ರಕಟಣೆ ನೀಡುವುದನ್ನು ಅಥವಾ ಮಾಧ್ಯಮಗಳಿಗೆ ಯಾವುದೇ ಮಾಹಿತಿಯನ್ನು ಸೋರಿಕೆ ಮಾಡಿಲ್ಲ’ ಎಂದು ಹೇಳಿದೆ.

ADVERTISEMENT

ಫೆಮಾ ಅಡಿಯಲ್ಲಿ ತಮ್ಮ ವಿರುದ್ಧ ಜಾರಿ ನಿರ್ದೇಶನಾಲಯದ (ಇ.ಡಿ) ತನಿಖೆಗೆ ಸಂಬಂಧಿಸಿ ಮಾಧ್ಯಮಗಳಲ್ಲಿ ಸೂಕ್ಷ್ಮ ಮಾಹಿತಿ ಸೋರಿಕೆ ಮಾಡದಂತೆ ತಡೆಯಬೇಕು ಎಂದು ಕೋರಿ ಮೊಯಿತ್ರಾ ಅವರು ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದರು.

ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ) ಅಡಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿ ಇದೇ 19ರಂದು ದೆಹಲಿಯ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ, ಮಹುವಾ ಅವರಿಗೆ ಇ.ಡಿ ಅಧಿಕಾರಿಗಳು ಸಮನ್ಸ್‌ ನೀಡಿದ್ದರು.

ಸಂಸತ್‌ನಲ್ಲಿ ಪ್ರಶ್ನೆ ಕೇಳಲು ಲಂಚ ಪಡೆಯಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಕೇಳಿರುವ ಪ್ರಶ್ನೆಗಳಿಗೆ ಟಿಎಂಸಿ ನಾಯಕಿ ಹಾಗೂ ಉಚ್ಚಾಟಿತ ಸಂಸದೆ ಮಹುವಾ ಮೊಯಿತ್ರಾ ಅವರು ಪ್ರತಿಕ್ರಿಯೆ ಸಲ್ಲಿಸಿದ್ದಾರೆ.

ಮಹುವಾ ಅವರು ಸಲ್ಲಿಸಿರುವ ಪ್ರತಿಕ್ರಿಯೆಯನ್ನು ಪರಿಶೀಲಿಸಿ, ಲೋಕಪಾಲ್‌ಗೆ ವರದಿ ಸಲ್ಲಿಸಲಾಗುವುದು ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ. ಮಹುವಾ ವಿರುದ್ಧ ಸಿಬಿಐ ತನಿಖೆಗೆ ಲೋಕಪಾಲ್‌ ಆದೇಶಿಸಿತ್ತು.

ಮಹುವಾ ಅವರು ಸಂಸತ್‌ನಲ್ಲಿ ಪ್ರಶ್ನೆ ಕೇಳಲು ಲಂಚ ಪಡೆದಿದ್ದಾರೆ ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆರೋಪಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.