ನವದೆಹಲಿ: ಜೈಲಿನಿಂದ ಬಿಡುಗಡೆಗೊಂಡ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಸ್ವಾಗತಿಸಲು ಉತ್ತರ ದೆಹಲಿಯ ಸಿವಿಲ್ ಲೈನ್ಸ್‌ನಲ್ಲಿರುವ ಅವರ ನಿವಾಸದ ಹೊರಗೆ ಪಟಾಕಿ ಸಿಡಿಸಿದ್ದಕ್ಕಾಗಿ ಅಪರಿಚಿತ ವ್ಯಕ್ತಿಗಳ ವಿರುದ್ಧ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
ಮುಂಬರುವ ಚಳಿಗಾಲದಲ್ಲಿ ವಾಯು ಮಾಲಿನ್ಯವನ್ನು ನಿಯಂತ್ರಿಸುವ ಉದ್ದೇಶದಿಂದ ರಾಷ್ಟ್ರ ರಾಜಧಾನಿಯಲ್ಲಿ ಪಟಾಕಿಗಳ ಉತ್ಪಾದನೆ, ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಿ ದೆಹಲಿ ಸರ್ಕಾರ ಸೋಮವಾರ ಆದೇಶಿಸಿತ್ತು.
ಆದೇಶ ಉಲ್ಲಂಘಿಸಿದ್ದಕ್ಕಾಗಿ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 223 (ಉದ್ದೇಶಪೂರ್ವಕವಾಗಿ ಸರ್ಕಾರಿ ಆದೇಶವನ್ನು ಉಲ್ಲಂಘಿಸುವುದು) ಅಡಿಯಲ್ಲಿ ಅಪರಿಚಿತ ವ್ಯಕ್ತಿಗಳ ವಿರುದ್ಧ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಶುಕ್ರವಾರ ಸಂಜೆ ತಿಹಾರ್ ಜೈಲಿನಿಂದ ಬಿಡುಗಡೆಯಾದ ನಂತರ ಸಿಎಂ ನಿವಾಸದ ಹೊರಗೆ ಪಟಾಕಿ ಸಿಡಿಸಲಾಗಿತ್ತು. ಈ ಬಗ್ಗೆ 6ನೇ ಫ್ಲ್ಯಾಗ್ ಸ್ಟಾಫ್ ರಸ್ತೆಯಲ್ಲಿ ನಿಯೋಜಿಸಲಾಗಿದ್ದ ಸಬ್ ಇನ್‌ಸ್ಟೆಕ್ಟರ್ ನೀಡಿದ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ದೆಹಲಿ ಅಬಕಾರಿ ನೀತಿ ಹಗರದಣದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣದಲ್ಲಿ ಅರವಿಂದ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಷರತ್ತುಬದ್ಧ ಜಾಮೀನು ನೀಡಿದೆ. ಸರಿಸುಮಾರು ಆರು ತಿಂಗಳ ಸೆರೆವಾಸದ ಬಳಿಕ ಕೇಜ್ರಿವಾಲ್ ಅವರು ಜೈಲಿನಿಂದ ಹೊರಬಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.