ನವದೆಹಲಿ: ಸಿಆರ್‌ಪಿಎಫ್ ಶಾಲೆ ಸಮೀಪ ನಡೆದ ಬಾಂಬ್ ಸ್ಫೋಟ ಪ್ರಕರಣಕ್ಕೂ ಖಾಲಿಸ್ತಾನಿ ಪ್ರತ್ಯೇಕತಾವಾದಿಗಳಿಗೂ ಸಂಬಂಧ ಇದೆಯೇ ಎಂಬ ಬಗ್ಗೆ ದೆಹಲಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
ಈ ಸಂಬಂಧ ಸಾಮಾಜಿಕ ಮಾಧ್ಯಮ ‘ಟೆಲಿಗ್ರಾಂ’ಗೆ ಪತ್ರ ಬರೆದು, ಸ್ಫೋಟದ ಹೊಣೆ ಹೊತ್ತ ಗುಂಪಿನ ಬಗ್ಗೆ ಮಾಹಿತಿ ಕೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಖಾಲಿಸ್ತಾನಿ ಪ್ರತ್ಯೇಕತಾವಾದಿಗಳನ್ನು ಬೆಂಬಲಿಸುವವರನ್ನು ಭಾರತ ಗುರಿಯಾಗಿಸಿದ್ದಕ್ಕೆ ಪ್ರತಿಯಾಗಿ ಈ ದಾಳಿ ನಡೆಸಲಾಗಿದೆ ಎಂದು ಹೇಳಲಾದ ಟೆಲಿಗ್ರಾಂ ಪೋಸ್ಟ್ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತು. ಹೀಗಾಗಿ ‘ಜಸ್ಟೀಸ್ ಲೀಗ್ ಇಂಡಿಯನ್’ ಗುಂಪಿನ ಸೃಷ್ಟಿಕರ್ತರ ಕುರಿತು ಮಾಹಿತಿ ನೀಡುವಂತೆ ಟೆಲಿಗ್ರಾಂಗೆ ಪೊಲೀಸರು ಪತ್ರ ಬರೆದಿದ್ದಾರೆ ಎಂದು ತಿಳಿಸಿವೆ.
ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ತಂಡವು ಸ್ಥಳಕ್ಕೆ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಕಚ್ಚಾಬಾಂಬ್ ಅನ್ನು ಪ್ಲಾಸ್ಟಿಕ್ ಬ್ಯಾಗ್‌ನಲ್ಲಿ ಸುತ್ತಿ, ಒಂದು ಅಡಿ ಆಳದ ಗುಂಡಿ ಅಗೆದು ಅದರಲ್ಲಿ ಇಟ್ಟಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಘಟನೆ ಸಂಬಂಧ ಭಾರತೀಯ ನ್ಯಾಯಸಂಹಿತೆಯ ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ.
ರೋಹಿಣಿಯ ಪ್ರಶಾಂತ್ ವಿಹಾರ್ ಪ್ರದೇಶದ ಸಮೀಪ ಭಾನುವಾರ ಬೆಳಿಗ್ಗೆ ಸ್ಫೋಟ ಸಂಭವಿಸಿದ್ದು, ಸಿಆರ್‌ಪಿಎಫ್ ಶಾಲೆಯ ಗೋಡೆಗಳಿಗೆ ಹಾನಿಯಾಗಿತ್ತು. ಅಲ್ಲದೆ ಸಮೀಪದ ಅಂಗಡಿಗಳ ನಾಮಫಲಕ, ಹೋರ್ಡಿಂಗ್ಸ್‌ಗಳಿಗೂ ಹಾನಿಯಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.