ನವದೆಹಲಿ: ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಚಂಪೈ ಸೊರೇನ್ ಅವರು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರ್ಪಡೆಯಾಗುವ ಸಾಧ್ಯತೆಯಿದೆ ಎಂಬ ಊಹಾಪೋಹಗಳ ನಡುವೆ ಇಂದು (ಭಾನುವಾರ) ದೆಹಲಿಗೆ ಭೇಟಿ ನೀಡಿರುವುದು ಮತ್ತಷ್ಟು ಪುಷ್ಠಿ ನೀಡಿದೆ.
ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಚಂಪೈ ಸೊರೇನ್, ‘ನಾನು ಬಿಜೆಪಿ ನಾಯಕರನ್ನು ಭೇಟಿ ಮಾಡಿಲ್ಲ. ವೈಯಕ್ತಿಕ ಕಾರಣದಿಂದಾಗಿ ದೆಹಲಿಗೆ ಬಂದಿದ್ದೇನೆ’ ಎಂದು ಹೇಳುವ ಮೂಲಕ ಬಿಜೆಪಿ ಸೇರ್ಪಡೆ ಪ್ರಶ್ನೆಯನ್ನು ತಳ್ಳಿ ಹಾಕಿದರು.
ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ಮುನ್ನ ಸೋರೆನ್ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಕೆಲ ಮಾಧ್ಯಮಗಳು ವರದಿ ಮಾಡಿವೆ.
ಬಿಜೆಪಿ ಶಾಸಕ ಮತ್ತು ವಿರೋಧ ಪಕ್ಷದ ನಾಯಕ ಅಮರ್ ಬೌರಿ ಅವರನ್ನು ಸೋರೆನ್ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ‘ನನಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲ, ನಾನು ಮಾಧ್ಯಮಗಳು ವರದಿ ಮಾಡುತ್ತಿರುವುದನ್ನು ಗಮನಿಸಿದ್ದೇನೆ’ ಎಂದು ಹೇಳಿದ್ದಾರೆ.
ಭೂ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಹೇಮಂತ್ ಸೊರೇನ್ ಅವರು ಜನವರಿ 31ರಂದು ಜಾರಿ ನಿರ್ದೇಶನಾಲಯದಿಂದ ಬಂಧಿತರಾಗಿದ್ದರು. ಅದಕ್ಕೂ ಮುನ್ನ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ, ಚಂಪೈ ಸೊರೇನ್ ಅವರನ್ನು ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಲಾಗಿತ್ತು. ಫೆ.2ರಂದು ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು.
ಐದು ತಿಂಗಳ ಬಳಿಕ ಜೈಲಿನಿಂದ ಬಿಡುಗಡೆಯಾದ ಹೇಮಂತ್ ಸೊರೇನ್ ಪುನಃ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿರುವುದಕ್ಕೆ ಚಂಪೈ ಸೊರೇನ್ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.