ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನೀರಿನ ಬಿಕ್ಕಟ್ಟು ತೀವ್ರವಾಗಿದ್ದು, ಒಂದು ತಿಂಗಳ ಅವಧಿಗೆ ಹೆಚ್ಚುವರಿ ನೀರು ಬಿಡುಗಡೆ ಮಾಡುವಂತೆ ಕೋರಿ ದೆಹಲಿಯ ಜಲ ಸಚಿವೆ ಆತಿಶಿ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹಾಗೂ ಹರಿಯಾಣ ಮುಖ್ಯಮಂತ್ರಿ ನಾಯಬ್ ಸಿಂಗ್ ಸೈನಿ ಅವರಿಗೆ ಪತ್ರ ಬರೆದಿದ್ದಾರೆ.
ಹೆಚ್ಚುವರಿ ನೀರು ಬಿಡಲು ಹರಿಯಾಣ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ದೆಹಲಿ ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಾಳೆ (ಸೋಮವಾರ) ನಡೆಸಲಿದೆ.
ಸುಪ್ರೀಂ ಕೋರ್ಟ್ ವೇಳಾಪಟ್ಟಿಯ ಪ್ರಕಾರ ನ್ಯಾಯಮೂರ್ತಿಗಳಾದ ಪಿ.ಕೆ.ಮಿಶ್ರಾ ಹಾಗೂ ಕೆ.ವಿ.ವಿಶ್ವನಾಥನ್ ಅವರನ್ನು ಒಳಗೊಂಡ ರಜಾ ಕಾಲದ ದ್ವಿಸದಸ್ಯ ಪೀಠವು ವಿಚಾರಣೆ ನಡೆಸಲಿದೆ.
ದೆಹಲಿ ಸರ್ಕಾರದ ಜಲ ಸಚಿವೆ ಆತಿಶಿ ಅವರು ಅರ್ಜಿ ಸಲ್ಲಿಸಿದ್ದು, ಕೇಂದ್ರ ಸರ್ಕಾರ, ಹರಿಯಾಣ ಸರ್ಕಾರ ಹಾಗೂ ಹಿಮಾಚಲ ಪ್ರದೇಶ ಸರ್ಕಾರವನ್ನು ಪ್ರತಿವಾದಿಗಳನ್ನಾಗಿಸಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿನ ನೀರಿನ ಅಭಾವವನ್ನು ತಗ್ಗಿಸುವ ನಿಟ್ಟಿನಲ್ಲಿ ಹೆಚ್ಚುವರಿ ನೀರಿನ ಅಗತ್ಯವಿದೆ ಎಂದು ಪ್ರತಿಪಾದಿಸಿದ್ದಾರೆ.
ಬಿಸಿಗಾಳಿಯ ಪರಿಣಾಮ ದೆಹಲಿಯಲ್ಲಿ ನೀರಿನ ಬೇಡಿಕೆ ಗಣನೀಯ ಪ್ರಮಾಣದಲ್ಲಿ ಹೆಚ್ಚಾಗಿದೆ. ಹೀಗಾಗಿ ಒಂದು ತಿಂಗಳವರೆಗೆ ಹೆಚ್ಚುವರಿ ನೀರು ಬಿಡುಗಡೆ ಮಾಡುವಂತೆ ಹರಿಯಾಣ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ದೆಹಲಿ ಸರ್ಕಾರ ಕೋರಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.