ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದಟ್ಟವಾದ ಮಂಜು ಆವರಿಸಿದ ಕಾರಣ ಬುಧವಾರ ವಿಮಾನಗಳ ಹಾರಾಟ ಮತ್ತು ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.
ಈ ಮಧ್ಯೆ ದೆಹಲಿಯಲ್ಲಿ ಇಂದು ಅಲ್ಪ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ವರದಿ ಮಾಡಿದೆ.
ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಬೆಳಿಗ್ಗೆ ರನ್‌ವೇ ಕಾಣಿಸದಷ್ಟು ದಟ್ಟವಾಗಿ ಮಂಜು ಆವರಿಸಿದ್ದರಿಂದ 50ಕ್ಕೂ ಹೆಚ್ಚು ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ. ಇದರಿಂದಾಗಿ ಪ್ರಯಾಣಿಕರು ತೊಂದರೆ ಎದುರಿಸುವಂತಾಯಿತು.
ವಿಮಾನ ನಿಲ್ದಾಣದಲ್ಲಿ ದಟ್ಟ ಮಂಜಿನಿಂದಾಗಿ 'ಶೂನ್ಯ ಗೋಚರತೆ' ದಾಖಲಾಗಿದೆ. ಬೆಳಿಗ್ಗೆ 9 ಗಂಟೆಯ ವರೆಗೂ ಇದೇ ಪರಿಸ್ಥಿತಿ ಮುಂದುವರಿಯಿತು. ರೈಲುಗಳ ಸಂಚಾರಕ್ಕೂ ಅಡಚಣೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಫೆಬ್ರುವರಿ 3ರವರೆಗೆ ಹವಾಮಾನ ವೈಪರೀತ್ಯ ಮುಂದುವರಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದೆಹಲಿಯಲ್ಲಿ ಕನಿಷ್ಠ ತಾಪಮಾನವು 7.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ವಾಯು ಗುಣಮಟ್ಟ ಸೂಚ್ಯಂಕ 'ಅತಿ ಕಳಪೆ' (370) ಮಟ್ಟದಲ್ಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.