ನವದೆಹಲಿ: ‘ಒಂದು ದೇಶ, ಒಂದು ಚುನಾವಣೆ’ ಯೋಜನೆಯನ್ನು ಜಾರಿಗೊಳಿಸುವ ಮೂಲಕ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರವು ದೇಶದ ಒಕ್ಕೂಟ ವ್ಯವಸ್ಥೆ ನಾಶಮಾಡಲು ಹೊರಟಿದೆ ಎಂದು ಎಐಎಂಐಎಂ ನಾಯಕ ಅಸಾದುದ್ದೀನ್ ಒವೈಸಿ ವಾಗ್ದಾಳಿ ನಡೆಸಿದ್ದಾರೆ.
ಒಂದು ದೇಶ, ಒಂದು ಚುನಾವಣೆಗೆ ಇಂದು (ಬುಧವಾರ) ಕೇಂದ್ರ ಸಚಿವ ಸಂಪುಟವು ಒಪ್ಪಿಗೆ ಸೂಚಿಸಿದ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಅವರು, ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
‘ಒಂದು ರಾಷ್ಟ್ರದ ಒಂದು ಚುನಾವಣೆ’ಯನ್ನು ನಾನು ಸತತವಾಗಿ ವಿರೋಧಿಸಿದ್ದೇನೆ. ಏಕೆಂದರೆ ಅದು ಸಂವಿಧಾನದ ಮೂಲ ರಚನೆ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆಯುಂಟು ಮಾಡುವುದರ ಜತೆಗೆ ಒಕ್ಕೂಟ ವ್ಯವಸ್ಥೆಯನ್ನು ಸಂಪೂರ್ಣವಾಗಿ ನಾಶಪಡಿಸುತ್ತದೆ. ನಗರಸಭೆ, ಪುರಸಭೆ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಪ್ರಚಾರ ಮಾಡುವ ಅನಿವಾರ್ಯತೆಯಿರುವ ಕಾರಣಕ್ಕೆ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರಿಗೆ ಮಾತ್ರ ಏಕಕಾಲಕ್ಕೆ ಚುನಾವಣೆ ನಡೆಸಬೇಕೆಂಬ ಅನಿವಾರ್ಯತೆ ಇದೆ. ಆದರೆ, ಆಗಾಗ್ಗೆ ಚುನಾವಣೆಗಳು ನಡೆಯುವುದರಿಂದ ಪ್ರಜಾಪ್ರಭುತ್ವದ ಹೊಣೆಗಾರಿಕೆ ಹೆಚ್ಚಾಗುತ್ತದೆ’ ಎಂದು ಒವೈಸಿ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರ ನೇತೃತ್ವದ ಉನ್ನತ ಮಟ್ಟದ ಸಮಿತಿಯು ಲೋಕಸಭೆ ಮತ್ತು ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆಗಳನ್ನು ನಡೆಸಿ, ನಂತರದ 100 ದಿನಗಳಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ಬಗ್ಗೆ ಇದೇ ವರ್ಷದ ಮಾರ್ಚ್‌ನಲ್ಲಿ ಶಿಫಾರಸು ಮಾಡಿತ್ತು.
ಕಾರ್ಯಸಾಧುವಲ್ಲ ಎಂದ ಖರ್ಗೆ
‘ಕೇಂದ್ರ ಸಚಿವ ಸಂಪುಟವು ಬುಧವಾರ ಅಂಗೀಕರಿಸಿರುವ ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯ ‘ಒಂದು ದೇಶ, ಒಂದು ಚುನಾವಣೆ’ ಯೋಜನೆಯು ಕಾರ್ಯಸಾಧುವಲ್ಲ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
‘ಇದು ಪ್ರಾಯೋಗಿಕವಾಗಿ ಅಸಾಧ್ಯ. ಯಾವುದೇ ಚುನಾವಣೆ ಬಂದರೂ, ಒಂದು ವಿಷಯವನ್ನು ಚರ್ಚೆಗೆ ಹುಡುಕಿಕೊಳ್ಳುವುದು ಬಿಜೆಪಿಯವರ ತಂತ್ರ. ಇದರಿಂದ ಜನರು ಎದುರಿಸುತ್ತಿರುವ ನೈಜ ಸಮಸ್ಯೆಗಳನ್ನು ಮರೆಮಾಚಿ, ಈ ವಿಷಯವನ್ನೇ ಚರ್ಚಿಸುವಂತೆ ಮಾಡುತ್ತಾರೆ’ ಎಂದಿದ್ದಾರೆ.
ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರೀನೇತ್ ಪ್ರತಿಕ್ರಿಯಿಸಿ, ‘ಒಂದು ದೇಶ, ಒಂದು ಚುನಾವಣೆ’ ಯೋಜನೆ ಎನ್ನುವುದು ಕೇಂದ್ರ ಸರ್ಕಾರದ ವೈಫಲ್ಯಗಳಿಂದ ಮುಚ್ಚಿಕೊಳ್ಳುವುದರ ಜತೆಗೆ ಜನರ ಗಮನ ಬೇರೆಡೆ ಸೆಳೆಯುವ ಪ್ರಯತ್ನವಲ್ಲದೆ ಬೇರೇನೂ ಅಲ್ಲ’ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.