ಮುಂಬೈ: ಬಿಜೆಪಿಯ ಮುಂಬೈ ಕಚೇರಿಯಲ್ಲಿ ಶುಕ್ರವಾರ ನಡೆದ ಸಂಭ್ರಮಾಚರಣೆಯಲ್ಲಿ ಮಹಾರಾಷ್ಟ್ರದ ನೂತನ ಉಪ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಭಾಗವಹಿಸಿಲ್ಲ.
ಎರಡೂವರೆ ವರ್ಷಗಳ ಮಹಾ ವಿಕಾಸ್ ಅಘಾಡಿ ಸರ್ಕಾರ ಪತನವಾಗಿರುವುದು ಮತ್ತು ಪಕ್ಷವು ಮರಳಿ ಅಧಿಕಾರಕ್ಕೆ ಬಂದಿರುವುದಕ್ಕೆ ಸಂಭ್ರಮಾಚರಣೆ ಆಯೋಜಿಸಲಾಗಿತ್ತು.
ಶಿವಸೇನಾ ಬಂಡಾಯ ನಾಯಕ ಏಕನಾಥ ಶಿಂಧೆ ನೇತೃತ್ವದ ಸರ್ಕಾರದ ಭಾಗವಾಗಿರುವುದಿಲ್ಲ ಎಂದು ಫಡಣವೀಸ್ ಗುರುವಾರ ಹೇಳಿದ್ದರು. ಆದರೆ, ಬಳಿಕ ಉಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು.
ಜುಲೈ 3ರಿಂದ ನಡೆಯಲಿರುವ ಮಹಾರಾಷ್ಟ್ರ ವಿಧಾನಸಭೆಯ ವಿಶೇಷ ಅಧಿವೇಶನದ ತಯಾರಿಗಾಗಿ ಫಡಣವೀಸ್ ಅವರು ತಮ್ಮ ನಿವಾಸದಲ್ಲಿ ಸಭೆಗಳನ್ನು ನಡೆಸುತ್ತಿದ್ದು, ವ್ಯಸ್ತರಾಗಿದ್ದಾರೆ. ಹೀಗಾಗಿ ಸಂಭ್ರಮಾಚರಣೆಯಲ್ಲಿ ಭಾಗಿಯಾಗಿಲ್ಲ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.
ಹೈದರಾಬಾದ್‌ನಲ್ಲಿ ಶುಕ್ರವಾರದಿಂದ ಆರಂಭವಾಗಲಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಫಡಣವೀಸ್ ಭಾಗವಹಿಸಲಿದ್ದಾರೆಯೇ ಎಂದು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಬಿಜೆಪಿ ನಾಯಕರೊಬ್ಬರು, ಇಲ್ಲಿನ ಪರಿಸ್ಥಿತಿಯನ್ನು ರಾಷ್ಟ್ರೀಯ ನಾಯಕರಿಗೆ ಫಡಣವೀಸ್ ತಿಳಿಸಿದ್ದಾರೆ. ಅಧಿವೇಶನದ ಕಾರಣ ಅವರು ಕಾರ್ಯಕಾರಿಣಿಯಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.