ಮುಂಬೈ:‘ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣದ ಅಪರಾಧಿಗಳನ್ನು ಸುಪ್ರೀಂ ಕೋರ್ಟ್ ನಿರ್ದೇಶನಾನುಸಾರ ಬಿಡುಗಡೆ ಮಾಡಲಾಗಿದೆ. ಆದರೆ ಅಪರಾಧಿಗಳನ್ನು ಸನ್ಮಾನಿಸುವುದು ಸರಿಯಲ್ಲ. ಇಂಥ ಕ್ರಮವನ್ನು ಸಮರ್ಥಿಸಲಾಗದು’ ಎಂದು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಹೇಳಿದ್ದಾರೆ.
ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಪರಿಷತ್‌ನಲ್ಲಿ ನಡೆದ ಚರ್ಚೆಯ ಸಂದರ್ಭ ಅವರು ಪ್ರತಿಕ್ರಿಯಿಸಿದ್ದು, ಇಲ್ಲಿ ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣದ ಬಗ್ಗೆ ಚರ್ಚೆ ಅಪ್ರಸ್ತುತ ಎಂದು ಹೇಳಿದ್ದಾರೆ.
‘ಅಪರಾಧಿಗಳು ಸುಮಾರು 20 ವರ್ಷಗಳವರೆಗೆ ಜೈಲಿನಲ್ಲಿದ್ದರು. ಸುಪ್ರೀಂ ಕೋರ್ಟ್ ನಿರ್ದೇಶನಾನುಸಾರ ಅವರನ್ನು ಬಿಡುಗಡೆ ಮಾಡಲಾಗಿದೆ. ಆದರೆ ಅಪರಾಧಿಗಳನ್ನು ಸನ್ಮಾನಿಸುವುದು ತಪ್ಪು. ಅಪರಾಧಿ ಅಪರಾಧಿಯೇ. ಇಂಥ ನಡೆಗಳು ಸಮರ್ಥನೀಯವಲ್ಲ’ ಎಂದು ಫಡಣವೀಸ್ ಹೇಳಿದ್ದಾರೆ.
ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣದ 11 ಅಪರಾಧಿಗಳನ್ನು ಆಗಸ್ಟ್ 15ರಂದು ಗುಜರಾತ್‌ನ ಗೋದ್ರಾ ಉಪ ಕಾರಾಗೃಹದಿಂದ ಬಿಡುಗಡೆ ಮಾಡಲಾಗಿತ್ತು. ಗುಜರಾತ್ ಸರ್ಕಾರದ ಕ್ಷಮಾಪಣೆ ನೀತಿ ಅನ್ವಯ ಈ ಕ್ರಮ ಕೈಗೊಳ್ಳಲಾಗಿತ್ತು. ಜೈಲಿನಿಂದ ಹೊರಬರುವಾರ ಅಪರಾಧಿಗಳಿಗೆ ಹಾರ ಹಾಕಿ ಸ್ವಾಗತಿಸಲಾಗಿತ್ತು. ಇದಕ್ಕೆ ವ್ಯಾಪಕ ಆಕ್ಷೇಪ ವ್ಯಕ್ತವಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.