ನವದೆಹಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಹಲವು ಬಾರಿ ಸಮನ್ಸ್ ಜಾರಿ ಮಾಡಿದ್ದರೂ ವಿಚಾರಣೆಗೆ ಹಾಜರಾಗದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ವಿರುದ್ಧ ದೆಹಲಿ ನ್ಯಾಯಾಲಯಕ್ಕೆ ಜಾರಿ ನಿರ್ದೇಶನಾಲಯ (ED) ಬುಧವಾರ ಮತ್ತೊಮ್ಮೆ ದೂರು ನೀಡಿದೆ ಎಂದು ಮೂಲಗಳು ಹೇಳಿವೆ.
ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅರವಿಂದ ಕೇಜ್ರಿವಾಲ್ ಅವರು ಸಮನ್ಸ್ ಸಂಖ್ಯೆ 4ರಿಂದ 8ಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಈ ಪ್ರಕರಣದ ವಿಚಾರಣೆ ಗುರುವಾರ ನಡೆಸುವುದಾಗಿ ನ್ಯಾಯಾಧೀಶರು ತಿಳಿಸಿದ್ದಾರೆ.
ಮೊದಲ ಮೂರು ಸಮನ್ಸ್‌ಗಳಿಗೆ ಪ್ರತಿಕ್ರಿಯೆ ನೀಡದೆ ಹಾಗೂ ವಿಚಾರಣೆಗೆ ಹಾಜರಾಗದ ಅರವಿಂದ ಕೇಜ್ರಿವಾಲ್ ವಿರುದ್ಧ ಜಾರಿ ನಿರ್ದೇಶನಾಲಯವು ಈ ಮೊದಲೂ ನ್ಯಾಯಾಲಯದ ಮೊರೆ ಹೋಗಿತ್ತು. ಈ ದೂರಿನ ವಿಚಾರಣೆಯೂ ಮಾರ್ಚ್ 16ರಂದು ನಡೆಯಲಿದೆ.
ಜಾರಿ ನಿರ್ದೇಶನಾಲಯ ಜಾರಿಗೊಳಿಸಿರುವ ಎಂಟೂ ಸಮನ್ಸ್‌ಗಳು ಕಾನೂನು ಬಾಹಿರ ಎಂದು ಕೇಜ್ರಿವಾಲ್ ಆರೋಪಿಸಿದ್ದಾರೆ. ಮಾರ್ಚ್ 12ರ ನಂತರ ವಿಡಿಯೊ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಬಹುದು ಎಂದು ಅವರು ಕಳೆದ ಬಾರಿ ಹೇಳಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.