ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು (ಇ.ಡಿ) ವೃತ್ತಿಪರ ಜಾಹೀರಾತುದಾರ ರಾಜೇಶ್ ಜೋಶಿಯನ್ನು ಬಂಧಿಸಿದೆ.
ಪ್ರಕರಣದಲ್ಲಿ ಇದುವರೆಗೆ ಎರಡು ಚಾರ್ಜ್‌ಶೀಟ್ ಫೈಲ್ ಮಾಡಿರುವ ಇ.ಡಿ, ಜೋಶಿ ಸೇರಿದಂತೆ ಒಟ್ಟು ಎಂಟು ಮಂದಿಯನ್ನು ಬಂಧಿಸಿದೆ.
ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ರಾಜೇಶ್ ಜೋಶಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
ಇ.ಡಿ ಸಲ್ಲಿಸಿರುವ ಆರೋಪ ಪಟ್ಟಿಯಲ್ಲಿ, ಅಬಕಾರಿ ನೀತಿಯಿಂದ ಪಡೆದ 100 ಕೋಟಿ ರೂಪಾಯಿ ಲಂಚದ ಒಂದು ಭಾಗವನ್ನು 2022ರಲ್ಲಿ ಗೋವಾದಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದ (ಎಎಪಿ) ಪ್ರಚಾರಕ್ಕಾಗಿ ಬಳಸಲಾಗಿದೆ ಎಂದು ಆರೋಪಿಸಲಾಗಿದೆ.
ದೆಹಲಿಯ ಅಬಕಾರಿ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ತನಿಖಾ ದಳ ಕೂಡ ಎಫ್‌ಐಆರ್ ದಾಖಲಿಸಿದೆ.
ಸಿಬಿಐ ಮತ್ತು ಇ.ಡಿ ದೂರುಗಳಲ್ಲಿ ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಸರ್ಕಾರದ ಇತರೆ ಅಧಿಕಾರಿಗಳು ಆರೋಪಿಗಳೆಂದು ಹೆಸರಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.