ಮುಂಬೈ:ಮಹಾರಾಷ್ಟ್ರದಲ್ಲಿ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆ ಆರಂಭವಾಗಿದೆ. ಈ ನಡುವೆ ಮುಖ್ಯಮಂತ್ರಿ ಏಕನಾಥ ಶಿಂದೆ ಅವರು ನವದೆಹಲಿಯಲ್ಲಿ ಭಾನುವಾರ ನಡೆಯುತ್ತಿರುವ ನೀತಿ ಆಯೋಗದ ಸಭೆಯಲ್ಲಿ ಭಾಗವಹಿಸಿದ್ದಾರೆ.
ಶಿಂದೆ ಅವರು ನೀತಿ ಆಯೋಗದ ಸಭೆಯಲ್ಲಿ ಭಾಗವಹಿಸುವ ಸಲುವಾಗಿ ದೆಹಲಿಗೆ ತೆರಳುತ್ತಿರುವುದಾಗಿ ಹೇಳಿದ್ದಾರಾದರೂ, ಅವರು (ಶಿಂದೆ) ಮತ್ತು ಉಪ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್, ಬಿಜೆಪಿಯ ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡಿ ಸಂಪುಟ ವಿಸ್ತರಣೆ ಕುರಿತು ಚರ್ಚಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಶಿಂದೆ ಹಾಗೂ ಫಡಣವೀಸ್ ಪ್ರಮಾಣವಚನ ಸ್ವೀಕರಿಸಿ 35 ದಿನಗಳು ಕಳೆದಿವೆ. ಆದಾಗ್ಯೂ ಸಂಪುಟ ವಿಸ್ತರಣೆ ಕಾರ್ಯ ನಡೆದಿಲ್ಲ. ಈ ಬಗ್ಗೆ ವಿರೋಧ ಪಕ್ಷಗಳು ಟೀಕಾಪ್ರಹಾರ ನಡೆಸುತ್ತಿವೆ.
ಸಂಭಾವ್ಯ ಸಚಿವರ ಪಟ್ಟಿ ಸಿದ್ಧಗೊಂಡಿದೆ. ಬಿಜೆಪಿ ಹೈಕಮಾಂಡ್ ಅದಕ್ಕೆ ಒಪ್ಪಿಗೆ ನೀಡುವುದಷ್ಟೇ ಬಾಕಿ ಇದೆ ಎನ್ನಲಾಗುತ್ತಿದೆ.
ಮಹಾರಾಷ್ಟ್ರದಲ್ಲಿ ಅಧಿಕಾರದಲ್ಲಿದ್ದ ಮಹಾ ವಿಕಾಸ ಆಘಾಡಿ (ಶಿವಸೇನಾ, ಕಾಂಗ್ರೆಸ್ ಮತ್ತು ಎನ್‌ಸಿಪಿ) ಸರ್ಕಾರದ ವಿರುದ್ಧ ಶಿಂದೆ ನೇತೃತ್ವದಲ್ಲಿ ಶಿವಸೇನಾದ ಹಲವು ಶಾಸಕರು ಬಂಡಾಯ ಸಾರಿದ್ದರು. ಅದಾದ ಬಳಿಕಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಮುಖ್ಯಮಂತ್ರಿ ಸ್ಥಾನಕ್ಕೆ ಜೂನ್ 29ರಂದು ರಾಜೀನಾಮೆ ನೀಡಿದ್ದರು. ಬಳಿಕ, ಶಿಂದೆ ಅವರು ಬಿಜೆಪಿಯ ಬೆಂಬಲದೊಂದಿಗೆ ಜೂನ್ 30ರಂದು ಮುಖ್ಯಮಂತ್ರಿಯಾಗಿ ಪ್ರಮಾಣ ಸ್ವೀಕರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.