ADVERTISEMENT

ಮಹಾರಾಷ್ಟ್ರ ಡಿಜಿಪಿ ರಶ್ಮಿ ಶುಕ್ಲಾ ವರ್ಗಾವಣೆಗೆ ಕೇಂದ್ರ ಚುನಾವಣಾ ಆಯೋಗ ಸೂಚನೆ

ಪಿಟಿಐ
Published 4 ನವೆಂಬರ್ 2024, 13:49 IST
Last Updated 4 ನವೆಂಬರ್ 2024, 13:49 IST
ರಶ್ಮಿ ಶುಕ್ಲಾ
ರಶ್ಮಿ ಶುಕ್ಲಾ   

ನವದೆಹಲಿ: ಮಹಾರಾಷ್ಟ್ರ ಪೊಲೀಸ್‌ ಮಹಾನಿರ್ದೇಶಕಿ (ಡಿಜಿಪಿ) ರಶ್ಮಿ ಶುಕ್ಲಾ ಅವರನ್ನು ಡಿಜಿಪಿ ಸ್ಥಾನದಿಂದ ತಕ್ಷಣವೇ ವರ್ಗಾವಣೆ ಮಾಡುವಂತೆ ಕೇಂದ್ರ ಚುನಾವಣಾ ಆಯೋಗವು ಮಹಾರಾಷ್ಟ್ರ ಸರ್ಕಾರಕ್ಕೆ ಸೂಚಿಸಿದೆ.

ಚುನಾವಣಾ ಆಯೋಗವು ಮಹಾರಾಷ್ಟ್ರ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಈ ಬಗ್ಗೆ ಸೋಮವಾರ ಪತ್ರ ಬರೆದಿದೆ. ರಶ್ಮಿ ಅವರಿಂದ ತೆರವಾಗುವ ಸ್ಥಾನಕ್ಕೆ ಮಹಾರಾಷ್ಟ್ರ ಕೇಡರ್‌ನ ಅತ್ಯಂತ ಹಿರಿಯ ಐಪಿಎಸ್‌ ಅಧಿಕಾರಿಯನ್ನು ನೇಮಿಸುವಂತೆ ಹಾಗೂ ಈ ಸಂಬಂಧ ಮೂವರು ಐಪಿಎಸ್‌ ಅಧಿಕಾರಿಗಳ ಪಟ್ಟಿಯನ್ನು ಮಂಗಳವಾರ ಮಧ್ಯಾಹ್ನದೊಳಗೆ ಕಳುಹಿಸುವಂತೆ ಸೂಚಿಸಿದೆ ಎಂದು ಮೂಲಗಳು ತಿಳಿಸಿವೆ.

ಡಿಜಿಪಿ ರಶ್ಮಿ ಅವರು ಮಹಾರಾಷ್ಟ್ರ ಸರ್ಕಾರದ ಕೈಗೊಂಬೆಯಾಗಿ ವರ್ತಿಸುತ್ತಿದ್ದಾರೆ ಎಂದು ಪ್ರತಿಪಕ್ಷಗಳು ದೂರಿದ್ದ ಬೆನ್ನಲ್ಲೆ ಈ ಬೆಳವಣಿಗೆ ನಡೆದಿದೆ.

ADVERTISEMENT

‘ಅಧಿಕಾರಿಗಳು ನಿಷ್ಪಕ್ಷಪಾತವಾಗಿ ಹಾಗೂ ನ್ಯಾಯಸಮ್ಮತವಾಗಿ ಕರ್ತವ್ಯ ನಿರ್ವಹಿಸಬೇಕು. ಕರ್ತವ್ಯದ ವೇಳೆ ಪಕ್ಷಾತೀತವಾಗಿ ವರ್ತಿಸಬೇಕು’ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌ ಅವರು ಈಚೆಗೆ ನಡೆದಿದ್ದ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಎಚ್ಚರಿಸಿದ್ದರು.

ಮಹಾರಾಷ್ಟ್ರದಲ್ಲಿ ಈಚೆಗೆ ರಾಜಕೀಯ ಪ್ರೇರಿತ ಅಪರಾಧ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದ ಅವರು, ‘ಕಾನೂನು ಸುವ್ಯವಸ್ಥೆಯನ್ನು ಬಲಪಡಿಸಿ, ಅಪರಾಧ ಪ್ರಕರಣಗಳನ್ನು ನಿಯಂತ್ರಿಸುವಂತೆ’ ಡಿಜಿಪಿ ರಶ್ಮಿ ಅವರಿಗೆ ಸೂಚಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.