ADVERTISEMENT

MUDA Scam | ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಜಾರಿ ನಿರ್ದೇಶನಾಲಯ

​ಪ್ರಜಾವಾಣಿ ವಾರ್ತೆ
Published 30 ಸೆಪ್ಟೆಂಬರ್ 2024, 14:33 IST
Last Updated 30 ಸೆಪ್ಟೆಂಬರ್ 2024, 14:33 IST
   

ನವದೆಹಲಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) 14 ಬದಲಿ ನಿವೇಶನಗಳ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಜಾರಿ ನಿರ್ದೇಶನಾಲಯವು (ಇ.ಡಿ) ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿದೆ. ಇದರಿಂದಾಗಿ, ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ.  

‘ಸಿದ್ದರಾಮಯ್ಯ ಕುಟುಂಬವು ಅಧಿಕಾರ ದುರುಪಯೋಗಪಡಿಸಿಕೊಂಡು ಮುಡಾದಿಂದ ಅಕ್ರಮವಾಗಿ ನಿವೇಶನಗಳನ್ನು ಪಡೆದಿದ್ದು, ಈ ಬಗ್ಗೆ ತನಿಖೆಗೆ ಆದೇಶಿಸಬೇಕು’ ಎಂದು ಕೋರಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ‌ ಕೃಷ್ಣ ಅವರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ವಿಚಾರಣೆ ನಡೆಸಿದ್ದ ಕೋರ್ಟ್, ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಲೋಕಾಯುಕ್ತ ಪೊಲೀಸರಿಗೆ ಬುಧವಾರ ಸೂಚಿಸಿತ್ತು.

ಅಕ್ರಮವಾಗಿ ನಿವೇಶನಗಳನ್ನು ಪಡೆದ ಆರೋಪದ ಮೇಲೆ ಸಿದ್ದರಾಮಯ್ಯ, ಪತ್ನಿ ಬಿ.ಎಂ. ಪಾರ್ವತಿ, ಭಾಮೈದ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಜಮೀನಿನ ಮಾಲೀಕ ದೇವರಾಜು ವಿರುದ್ಧ ಮೈಸೂರಿನ ಲೋಕಾಯುಕ್ತ ಪೊಲೀಸರು ಶುಕ್ರವಾರ ಎಫ್ಐಆರ್ ದಾಖಲಿಸಿದ್ದರು. ಇದರ ಬೆನ್ನಲ್ಲೇ, ಮುಖ್ಯಮಂತ್ರಿ ವಿರುದ್ಧ ಸ್ನೇಹಮಯಿ ಕೃಷ್ಣ ಅವರು ಜಾರಿ ನಿರ್ದೇಶನಾಲಯಕ್ಕೆ ದೂರು ನೀಡಿದ್ದರು.

ADVERTISEMENT

ಲೋಕಾಯುಕ್ತ ಪೊಲೀಸರು ದಾಖಲಿಸಿರುವ ಎಫ್‌ಐಆರ್ ಅನ್ನು ಮೂಲವಾಗಿಟ್ಟುಕೊಂಡು ತನಿಖಾ ದಳವು ಸಿದ್ದರಾಮಯ್ಯ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಇ.ಡಿ. ಮೂಲಗಳು ತಿಳಿಸಿವೆ. 

ಕೇಂದ್ರೀಯ ತನಿಖಾ ದಳವು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಲು ಕಾನೂನಿನಲ್ಲಿ ಅವಕಾಶ ಇಲ್ಲ. ಇತರ ತನಿಖಾ ಸಂಸ್ಥೆಗಳು ದಾಖಲಿಸಿದ ಎಫ್‌ಐಆರ್‌ಗಳನ್ನು ಸಂಸ್ಥೆ ಅವಲಂಬಿಸಬೇಕಾಗುತ್ತದೆ. ಲೋಕಾಯುಕ್ತ ಪೊಲೀಸರ ಎಫ್‌ಐಆರ್ ಅಧ್ಯಯನ ನಡೆಸಿದ ಬಳಿಕ ಇ.ಡಿ. ಅಧಿಕಾರಿಗಳು ಮುಖ್ಯಮಂತ್ರಿ ಮತ್ತು ಇತರರ ವಿರುದ್ಧ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳನ್ನು ಅನ್ವಯಿಸುವ ‘ಜಾರಿ ನಿರ್ದೇಶನಾಲಯ ಪ್ರಕರಣ ಮಾಹಿತಿ ವರದಿ (ಇಸಿಐಆರ್)’ ದಾಖಲಿಸಿದ್ದಾರೆ. ಇದು ಪೊಲೀಸರು ದಾಖಲಿಸಿರುವ ಎಫ್‌ಐಆರ್‌ಗೆ ಸಮ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.