ಬೆಂಗಳೂರು: ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ (ಇ.ಡಿ), ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸೋಮವಾರ ವಿಚಾರಣೆ ನಡೆಸಲಿದೆ.
ರಾಹುಲ್ ಗಾಂಧಿ ಅವರ ಜತೆಗೆ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಇದ್ದು, ಮನೆಯಿಂದ ಅವರಿಬ್ಬರೂ ಇ.ಡಿ ಕಚೇರಿಗೆ ಜೊತೆಯಾಗಿಯೇ ಹೋಗಿದ್ದಾರೆ.
ರಾಹುಲ್ ಗಾಂಧಿಯವರನ್ನು ಇ.ಡಿ ಅಧಿಕಾರಿಗಳು ವಿಚಾರಣೆಗೆ ಒಳಪಡಿಸುತ್ತಿರುವುದನ್ನು ವಿರೋಧಿಸಿ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ದೇಶದಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ.
ದೇಶದಾದ್ಯಂತ ಇರುವ ಇ.ಡಿ ಕಚೇರಿಗಳ ಮುಂದೆ ಕಾಂಗ್ರೆಸ್ ಪ್ರತಿಭಟನೆ ಹಮ್ಮಿಕೊಂಡಿದೆ. ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.
ಮತ್ತೊಂದೆಡೆ, ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಎದುರಾಗಿರುವ ಅಕ್ರಮ ಹಣಕಾಸು ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿ ಇ.ಡಿ. ಅಧಿಕಾರಿಗಳು ನೀಡಿರುವ ನೋಟಿಸ್ ಅನ್ನು ಪರಿಗಣಿಸಿ, ರಾಹುಲ್ ಗಾಂಧಿ ಇ.ಡಿ. ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುತ್ತಿದ್ದಾರೆ.
ರಾಹುಲ್ ಗಾಂಧಿ ವಿಚಾರಣೆಗೆ ಇ.ಡಿ. ಅಧಿಕಾರಿಗಳು ಎಲ್ಲ ಸಿದ್ಧತೆ ಮಾಡಿಕೊಂಡಿದ್ದಾರೆ. ಅಲ್ಲದೆ, ವಿವಿಧೆಡೆ ಪ್ರತಿಭಟನೆ ನಡೆಯುತ್ತಿರುವುದರಿಂದ, ಭದ್ರತೆಯನ್ನು ಕೂಡ ಹೆಚ್ಚಿಸಲಾಗಿದೆ.
ರಾಹುಲ್ ಗಾಂಧಿ ಅವರಿಗೆ ನೈತಿಕ ಬೆಂಬಲ ಸೂಚಿಸುವ ಸಲುವಾಗಿ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಇತರರು ಕಾಂಗ್ರೆಸ್ ಪ್ರಧಾನ ಕಚೇರಿಗೆ ಆಗಮಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.