ಮುಂಬೈ: ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಪ್ರಾಣ ಪ್ರತಿಷ್ಠಾಪನಾ ಸಮಾರಂಭದ ಪ್ರಯುಕ್ತ ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ಸ್ವಚ್ಛತಾ ಅಭಿಯಾನವನ್ನು ಕೈಗೊಳ್ಳುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಅವರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.
ತಮ್ಮ ಅಧಿಕೃತ ನಿವಾಸದಲ್ಲಿ ನಡೆದ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ‘ಪ್ರಧಾನಿ ನರೇಂದ್ರ ಮೋದಿ ಅವರು ದೇವಾಲಯಗಳನ್ನು ಸ್ವಚ್ಛವಾಗಿಡಲು ಕರೆ ನೀಡಿದ್ದಾರೆ. ಮಹಾರಾಷ್ಟ್ರದ ಜಿಲ್ಲಾಧಿಕಾರಿಗಳು ಎಲ್ಲಾ ದೇವಾಲಯಗಳಲ್ಲಿ ಸ್ವಚ್ಛತಾ ಅಭಿಯಾನವನ್ನು ಕೈಗೊಳ್ಳಬೇಕು ಹಾಗೂ ಅವುಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಬೇಕು. ಒಂದು ವಾರದೊಳಗೆ ಬದಲಾವಣೆ ಗೋಚರಿಸಬೇಕು’ ಎಂದು ತಿಳಿಸಿದ್ದಾರೆ.
ಪ್ರತಿ ಜಿಲ್ಲೆಯ ಜಿಲ್ಲಾ ಯೋಜನಾ ಮತ್ತು ಅಭಿವೃದ್ಧಿ ಮಂಡಳಿಯು ನಿಯಮಿತ ಅಂತರದಲ್ಲಿ ದೇವಾಲಯಗಳು ಹಾಗೂ ಸುತ್ತಮುತ್ತಲಿನ ಸ್ವಚ್ಛತೆ ಕೈಗೊಳ್ಳಲು ಸ್ವಲ್ಪ ಹಣವನ್ನು ವಿನಿಯೋಗಿಸಬೇಕು. ಇದಕ್ಕಾಗಿ ವಿಶೇಷ ಯೋಜನೆ ರೂಪಿಸಬೇಕು. ಡಿಪಿಡಿಸಿಗಳು ಇದಕ್ಕಾಗಿ ಹಣವನ್ನು ವಿನಿಯೋಗಿಸಬಹುದು ಎಂದು ಶಿಂದೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು ಎಂದು ಪ್ರಕಟಣೆ ತಿಳಿಸಿದೆ.
ಈ ಸ್ವಚ್ಛತಾ ಅಭಿಯಾನದ ಮೇಲ್ವಿಚಾರಣೆಗೆ ನೋಡಲ್ ಅಧಿಕಾರಿಯನ್ನು ನೇಮಿಸುವಂತೆ ಸಿಎಂ ಶಿಂದೆ ರಾಜ್ಯ ಕಂದಾಯ ಇಲಾಖೆಗೆ ಸೂಚಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.