ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಶನಿವಾರ ಆಯೋಜಿಸುತ್ತಿರುವ ಔತಣಕೂಟಕ್ಕೆ ಮಾಜಿ ಪ್ರಧಾನಿಗಳು ಮತ್ತು ವಿರೋಧ ಪಕ್ಷಗಳು ಆಡಳಿತದಲ್ಲಿರುವ ಕೆಲವು ಮುಖ್ಯಮಂತ್ರಿಗಳು ಗೈರಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಅನಾರೋಗ್ಯದ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿಗಳಾದ ಎಚ್.ಡಿ. ದೇವೇಗೌಡ ಮತ್ತು ಮನಮೋಹನ್ ಸಿಂಗ್ ಅವರು ಔತಣಕೂಟದಲ್ಲಿ ಭಾಗವಹಿಸುತ್ತಿಲ್ಲ. ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ದೇವೇಗೌಡ, ಜಿ20 ಶೃಂಗಸಭೆ ಯಶಸ್ಸಿಗೆ ಶುಭ ಹಾರೈಸಿದ್ದಾರೆ.
ಔತಣಕೂಟಕ್ಕೆ ವಿರೋಧ ಪಕ್ಷಗಳು ಆಡಳಿತದಲ್ಲಿರುವ ಮುಖ್ಯಮಂತ್ರಿಗಳಿಗೂ ಆಹ್ವಾನ ಪತ್ರಿಕೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಆದರೆ ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜ್ಯಗಳ ಮುಖ್ಯಮಂತ್ರಿಗಳು ಗೈರು ಹಾಜರಾಗುವ ಸಾಧ್ಯತೆಯಿದೆ. ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸುತ್ತಿಲ್ಲ ಎಂದು ಮೂಲಗಳು ತಿಳಿಸಿವೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಯೋಜಿಸುತ್ತಿರುವ ಕಾರ್ಯಕ್ರಮದಲ್ಲಿ ಭಾಗಿಯಾಗುವುದಾಗಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ. ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸಹ ಹಾಜರಾಗುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ.
ಏತನ್ಮಧ್ಯೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಔತಣಕೂಟಕ್ಕೆ ಆಹ್ವಾನ ನೀಡಿಲ್ಲ ಎಂದು ಕಾಂಗ್ರೆಸ್ ಆರೋಪಿಸಿದೆ. ಈ ಕುರಿತು ಯುರೋಪ್ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.