ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಿಆರ್‌ಎಸ್ ನಾಯಕಿ ಕೆ. ಕವಿತಾ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯವು ಮಂಗಳವಾರ ಮೇ 20ರವರೆಗೆ ವಿಸ್ತರಿಸಿದೆ.
ಕೆ. ಕವಿತಾ ಅವರ ನ್ಯಾಯಾಂಗ ಬಂಧನದ ಅವಧಿ ಮಂಗಳವಾರ ಕೊನೆಗೊಂಡಿದ್ದರಿಂದಾಗಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಸಿಬಿಐ ಮತ್ತು ಇ.ಡಿ ತನಿಖೆ ನಡೆಸುವ ಪ್ರಕರಣಗಳಿಗೆ ಸಂಬಂಧಿಸಿದ ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ, ನ್ಯಾಯಾಂಗ ಬಂಧನದ ಅವಧಿ ವಿಸ್ತರಿಸಿ ಆದೇಶ ಹೊರಡಿಸಿದರು.
ಜೊತೆಗೆ ಈ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯವು (ಇ.ಡಿ) ಶುಕ್ರವಾರ ಹೊಸದಾಗಿ ಸಲ್ಲಿಸಿರುವ ದೋಷಾರೋಪಪಟ್ಟಿಯನ್ನು ಪರಿಗಣಿಸಬಹುದೇ ಎಂಬುದರ ಆದೇಶವನ್ನು ಮೇ 20ಕ್ಕೆ ಕಾಯ್ದಿರಿಸಿದೆ. ಕವಿತಾ ಅವರನ್ನು ವಿಚಾರಣೆಗೊಳಪಡಿಸಲು ಅಗತ್ಯವಿರುವ ಸಾಕ್ಷ್ಯಾಧಾರಗಳು ದೋಷಾರೋಪ ಪಟ್ಟಿಯಲ್ಲಿವೆ ಎಂದು ಜಾರಿ ನಿರ್ದೇಶನಾಲಯ ಮಂಗಳವಾರ ವಾದಿಸಿತು.
ದೆಹಲಿ ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಈವರೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸೇರಿ 18 ಮಂದಿಯನ್ನು ಬಂಧಿಸಿದೆ. ಈ ಪೈಕಿ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ. ಜೊತೆಗೆ ಈ ಪ್ರಕರಣ ಸಂಬಂಧ ಇ.ಡಿ ಈವರೆಗೆ 7 ಆರೋಪ ಪಟ್ಟಿಗಳನ್ನು ಸಲ್ಲಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.